ನವದೆಹಲಿ: ‘ದೇಶಕ್ಕೆ ಉತ್ತಮ ಮತ್ತು ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
18ನೇ ಲೋಕಸಭೆಯ ಮೊದಲ ಅಧಿವೇಶನದ ಆರಂಭಕ್ಕೂ ಮುನ್ನ ನೂತನ ಸಂಸತ್ ಸಂಕೀರ್ಣದಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋದಿ, ‘ಸ್ವಾತಂತ್ರ್ಯದ ನಂತರ ಇದೇ ಮೊದಲ ಬಾರಿಗೆ ನಮ್ಮದೇ ನೂತನ ಸಂಸತ್‌ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯುತ್ತಿದೆ. ‘ಶ್ರೇಷ್ಠ ಭಾರತ' ಮತ್ತು 'ವಿಕಸಿತ ಭಾರತ' ನಿರ್ಮಾಣದ ಸಂಕಲ್ಪದೊಂದಿಗೆ 18ನೇ ಲೋಕಸಭಾ ಅಧಿವೇಶನ ಆರಂಭವಾಗಲಿದೆ’ ಎಂದರು.
‘ಜನರ ಆಶೋತ್ತರಗಳನ್ನು ಈಡೇರಿಸುವಲ್ಲಿ ನಮ್ಮ ಸರ್ಕಾರ ಎಲ್ಲರನ್ನೂ ಜೊತೆಯಲ್ಲಿ ಕರೆದೊಯ್ಯುಲಿದೆ. 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವ ಕನಸಿನೊಂದಿಗೆ ಹೆಜ್ಜೆ ಇಟ್ಟಿದ್ದೇವೆ’ ಎಂದು ಹೇಳಿದರು.
ಈ ವೇಳೆ ತುರ್ತು ಪರಿಸ್ಥಿತಿ ಕುರಿತು ಮಾತನಾಡಿದ ಅವರು, ‘ನಾಳೆ(ಜೂನ್ 25) ತುರ್ತು ಪರಿಸ್ಥಿತಿ ಘೋಷಣೆಯಾಗಿ 50 ವರ್ಷ ಆಗಲಿದೆ. ಸಂವಿಧಾನವನ್ನು ತಿರಸ್ಕರಿಸಿ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಆ ದಿನ ಭಾರತದ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆಯಾಗಿದೆ’ ಎಂದು ಹೇಳಿದರು.
ಇದೇ ವೇಳೆ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಜನರು ಪ್ರತಿಪಕ್ಷಗಳಿಂದ ಉತ್ತಮ ನಡೆಯನ್ನು ನಿರೀಕ್ಷಿಸುತ್ತಾರೆ. ಆದರೆ ಪ್ರತಿಪಕ್ಷಗಳು ಆ ರೀತಿಯಲ್ಲಿ ವರ್ತಿಸುತ್ತಿಲ್ಲ. ಸಂಸತ್ತಿನಲ್ಲಿ ಜನರು ಚರ್ಚೆ ಬಯಸುತ್ತಾರೆಯೇ ವಿನಃ ಘೋಷಣೆಗಳನಲ್ಲ. ದೇಶಕ್ಕೆ ಜವಾಬ್ದಾರಿಯುತ ಪ್ರತಿಪಕ್ಷದ ಅಗತ್ಯವಿದೆ’ ಎಂದರು.
ಇದಕ್ಕೂ ಮುನ್ನ 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.