ನವದೆಹಲಿ: ಸಂಪ್ರದಾಯಗಳ ಹೆಸರಿನಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆ(ಪಿಸಿಎಂಎ) ಅನುಷ್ಠಾನಕ್ಕೆ ಅಡ್ಡಿ ಉಂಟು ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಯಾವುದೇ ವೈಯಕ್ತಿಕ ಕಾನೂನಿನಡಿ ಸಂಪ್ರದಾಯಗಳನ್ನು ಉಲ್ಲೇಖಿಸಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ದುರ್ಬಳಕೆ ಮಾಡುವಂತಿಲ್ಲ ಎಂದಿರುವ ಸುಪ್ರೀಂ ಕೋರ್ಟ್, ‘ಬಾಲ್ಯ ವಿವಾಹಗಳಿಂದಾಗಿ, ತನ್ನ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಯ ಸ್ವಾತಂತ್ರ್ಯದ ಉಲ್ಲಂಘನೆಯಾಗುತ್ತದೆ’ ಎಂದಿದೆ.
ಅರ್ಜಿ ವಿಚಾರಣೆ ನಡೆಸಿದ, ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ ಹಾಗೂ ಮನೋಜ್ ಮಿಶ್ರಾ ಅವರಿದ್ದ ನ್ಯಾಯಪೀಠ, ದೇಶದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಮಾರ್ಗಸೂಚಿಗಳನ್ನು ನೀಡಿದೆ.
‘ವೈಯಕ್ತಿಕ ಕಾನೂನುಗಳಿಗಿಂತ ಬಾಲ್ಯ ವಿವಾಹ ನಿಷೇಧ ಕಾಯ್ದೆಗೇ ಹೆಚ್ಚು ಮಹತ್ವ ನೀಡಬೇಕು ಎಂಬುದು ಕೂಡ ಕೇಂದ್ರ ಸರ್ಕಾರದ ವಾದವಾಗಿದೆ’ ಎಂದ ಪೀಠ, ‘ಬಾಲ್ಯ ವಿವಾಹಗಳನ್ನು ತಡೆಗಟ್ಟುವ ಸಂಬಂಧ ನೀಡಿರುವ ತೀರ್ಪು ವ್ಯಾಪಕ ಸಾಮಾಜಿಕ ವಿಶ್ಲೇಷಣೆ ಒಳಗೊಂಡಿದೆ’ ಎಂದು ಹೇಳಿದೆ.
ಬಾಲ್ಯ ವಿವಾಹ ನಿಷೇಧ ಕಾಯ್ದೆಯನ್ನು ಜಾರಿಗೊಳಿಸುವ ಸಂಸ್ಥೆ/ಇಲಾಖೆಗಳು ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಒತ್ತು ನೀಡದೇ ಬಾಲ್ಯ ವಿವಾಹ ತಡೆಗಟ್ಟುವುದಕ್ಕೆ ಹೆಚ್ಚು ಪ್ರಯತ್ನಿಸಬೇಕು ಎಂದೂ ಹೇಳಿದೆ.
ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಕೋರಿ ಸೊಸೈಟಿ ಫಾರ್ ಎನ್‌ಲೈಟೆನ್‌ಮೆಂಟ್ ಹಾಗೂ ವಾಲಂಟರಿ ಆ್ಯಕ್ಷನ್ ಎಂಬ ಸಂಸ್ಥೆಗಳು ಈ ಕುರಿತು ಅರ್ಜಿ ಸಲ್ಲಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.