ನವದೆಹಲಿ: ತಿರುಮಲ ದೇವಸ್ಥಾನದ ಪ್ರಸಾದ ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಯ ಕೊಬ್ಬು ಪತ್ತೆ ಪ್ರಕರಣ ಕುರಿತು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.
ರೈತ ಹಾಗೂ ಹಿಂದೂ ಸೇನೆಯ ಅಧ್ಯಕ್ಷ ಸುರ್ಜಿತ್ ಸಿಂಗ್ ಯಾದವ್ ಎಂಬುವವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ. 'ತಿರುಪತಿಯ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಸಿ ತಯಾರಿಸಿದ ಲಡ್ಡುವನ್ನು ನೀಡಲಾಗಿದೆ. ಇದರಿಂದ ಹಿಂದೂ ಧರ್ಮವನ್ನು ಅಪಹಾಸ್ಯ ಮಾಡಿದ್ದಲ್ಲದೇ ಅವರ(ಹಿಂದೂಗಳ) ಭಾವನೆಗಳಿಗೆ ಧಕ್ಕೆ ಉಂಟಾಗಿದೆ' ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
'ಲಡ್ಡು ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಅಂಶ ಪತ್ತೆಯಾಗಿದೆ ಎಂದು ವರದಿಯಾಗಿದೆ. ಈ ವಿಚಾರ ಹಿಂದೂ ಸಮುದಾಯದ ಜನರ ಆತ್ಮಸಾಕ್ಷಿಯನ್ನು ಅಲುಗಾಡಿಸಿದೆ ಮತ್ತು ಅವರ ಧಾರ್ಮಿಕ ಭಾವನೆಗಳನ್ನು ಕೆರಳಿಸಿದೆ' ಎಂದೂ ಅವರು ಹೇಳಿದ್ದಾರೆ.
'ಲಡ್ಡು ತಯಾರಿಸಲು, ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು' ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ್ದರು. ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, 'ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.