ನವದೆಹಲಿ: ಭಾರಿ ಮಳೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಎದುರಿಸಲು ಕೇಂದ್ರ ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ್ದಾರೆ.
ದೂರವಾಣಿ ಮೂಲಕ ನಾಯ್ಡು ಅವರೊಂದಿಗೆ ಮಾತನಾಡಿದ ಮೋದಿ ಅವರು, ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.
ಪ್ರವಾಹ ಪರಿಹಾರ ಕಾರ್ಯಗಳ ಬಗ್ಗೆ ಪ್ರಧಾನಿ ಅವರಿಗೆ ಚಂದ್ರಬಾಬು ನಾಯ್ಡು ಅವರು ವಿವರಿಸಿದ್ದಾರೆ. ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರದ ಇಲಾಖೆಗಳಿಗೆ ಸೂಚಿಸಲಾಗಿದೆ ಎಂದು ಮೋದಿ ಅವರು ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರ ಭಾನುವಾರ ತಡರಾತ್ರಿ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಆಂಧ್ರ ಪ್ರದೇಶದಲ್ಲಿ ಎರಡನೇ ದಿನವೂ ಭಾರಿ ಮಳೆ ಮುಂದುವರಿದಿದ್ದು, ಐದು ಜಿಲ್ಲೆಗಳ 294 ಗ್ರಾಮಗಳಿಂದ 13,227 ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಎನ್‌ಡಿಆರ್‌ಎಫ್‌ನ 26 ತಂಡಗಳನ್ನು ನಿಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.