ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೀಲ್ದಾಹ್‌ಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 15 ಜನ ಮೃತಪಟ್ಟು, 60 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ಸುದ್ದಿ ದುಃಖಕರವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಪ್ರಧಾನಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
'ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದೇನೆ. ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುತ್ತಿದೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಘಟನಾ ಸ್ಥಳಕ್ಕೆ ತೆರಳುತ್ತಿದ್ದಾರೆ' ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.