ADVERTISEMENT

LS Polls |ಪ್ರಧಾನಿ ಮೋದಿ ಹ್ಯಾಟ್ರಿಕ್ ಗೆಲುವು ಸಾಧಿಸಲಿದ್ದಾರೆ: ಅನುರಾಗ್ ಠಾಕೂರ್

ಪಿಟಿಐ
Published 12 ಮೇ 2024, 9:53 IST
Last Updated 12 ಮೇ 2024, 9:53 IST
ಅನುರಾಗ್ ಠಾಕೂರ್
ಅನುರಾಗ್ ಠಾಕೂರ್   

ಹಮೀರ್‌ಪುರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸುವ ಮೂಲಕ ವಿಕಸಿತ ಭಾರತವನ್ನು ನಿರ್ಮಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ಧರಾಗಿದ್ದಾರೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅನುರಾಗ್‌ ಠಾಕೂರ್‌ ಹೇಳಿದ್ದಾರೆ.‌

‘ಪ್ರಧಾನಿ ಮೋದಿ ಅವರ ವಿರುದ್ಧ ವಿರೋಧ ಪಕ್ಷಗಳು ಮಾಡುವ ಯಾವುದೇ ಆರೋಪಗಳು ಅವರಿಗೆ ಅಂಟುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುತ್ತೇವೆಂಬ ವಿಪಕ್ಷಗಳ ಹೇಳಿಕೆ ನಗೆಪಾಟಲಿನ ವಿಚಾರವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 303 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ 370 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ’ ಎಂದು ಸುದ್ದಿಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಮೂರನೇ ಹಂತದ ಮತದಾನದ ನಂತರ ಪ್ರಧಾನಿ ಮೋದಿ ಅವರು ಹ್ಯಾಟ್ರಿಕ್‌ ಗೆಲುವಿನ ಹಾದಿಯಲ್ಲಿದ್ದಾರೆ ಎಂದು ನಾನು ಹೇಳಬಲ್ಲೆ. ಏಕೆಂದರೆ ಕಾಂಗ್ರೆಸ್‌ ಅಭ್ಯರ್ಥಿಗಳು ರಣರಂಗದಿಂದ ಹಿಂದೆ ಸರಿದಿದ್ದಾರೆ. ಸೂರತ್‌ ಹಾಗೂ ಇಂದೋರ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಚುನಾವಣೆಯಿಂದ ಹಿಂದೆ ಸರಿದಿದ್ದಾರೆ. ಒಡಿಶಾದಲ್ಲಿ ಅಭ್ಯರ್ಥಿಯೊಬ್ಬರು ಟಿಕೆಟ್‌ ಹಿಂದಿರುಗಿಸಿದ್ದಾರೆ. 2019ರಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಅಮೇಠಿಯಿಂದ ವಯನಾಡಿಗೆ ಪಲಾಯನ ಮಾಡಿದ್ದರು. ಈಗ ರಾಯ್‌ಬರೇಲಿಯಿಂದ ಸ್ಪರ್ಧಿಸುತ್ತಿದ್ದಾರೆ. ಮುಂದೆ ಎಲ್ಲಿಗೆ ಹೋಗುತ್ತಾರೆ ಎಂದು ನನಗೆ ತಿಳಿದಿಲ್ಲ ಎಂದು ಹೇಳಿದರು.

ADVERTISEMENT

ದೇಶದ ಅಭಿವೃದ್ಧಿಗೆ ಸ್ಥಿರತೆ ಮತ್ತು ನಿರಂತರತೆಯು ಪ್ರಮುಖವಾಗಿದೆ. 2014ರ ಮೊದಲು ಭಾರತ 10ನೇ ಅತಿದೊಡ್ಡ ಆರ್ಥಿಕತೆಯಾಗಿತ್ತು. ಆದರೆ, ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿ ವಿಶ್ವದ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಮಾರ್ಪಟ್ಟಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.