ನವದೆಹಲಿ: ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿದ ಘಟನೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಘಟನೆಯ ಸಂಪೂರ್ಣ ಹೊಣೆ ಹೊರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಉತ್ತರ ಪ್ರದೇಶದ ಗೊಂಡಾ ಬಳಿ ಇಂದು ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್‌ನ 8 ಬೋಗಿಗಳು ಹಳಿತಪ್ಪಿವೆ. ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದಲ್ಲಿ ನಾಲ್ವರು ಸಾವಿಗೀಡಾಗಿರುವುದಾಗಿ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸ್ಪಷ್ಟಪಡಿಸಿದ್ದಾರೆ.
'ಉತ್ತರ ಪ್ರದೇಶದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್‌ಪ್ರೆಸ್ ಹಳಿತಪ್ಪಿರುವುದು ಮೋದಿ ಸರ್ಕಾರವು ರೈಲು ಸುರಕ್ಷತೆಯನ್ನು ಹೇಗೆ ವ್ಯವಸ್ಥಿತವಾಗಿ ಅಪಾಯಕ್ಕೆ ಸಿಲುಕಿಸಿದೆ ಎಂಬುದಕ್ಕೆ ಮತ್ತೊಂದು ಉದಾಹರಣೆಯಾಗಿದೆ' ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಮೃತರ ಕುಟುಂಬಗಳಿಗೆ ನಮ್ಮ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇವೆ' ಎಂದು ಹೇಳಿದ್ದಾರೆ.
ಒಂದು ತಿಂಗಳ ಹಿಂದೆ, ಸೀಲ್ದಾ-ಅಗರ್ತಲಾ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದು 11 ಜನರು ಪ್ರಾಣ ಕಳೆದುಕೊಂಡಿದ್ದರು. ಸ್ವಯಂಚಾಲಿತ ಸಿಗ್ನಲ್ ವೈಫಲ್ಯ, ಕಾರ್ಯಾಚರಣೆ ನಿರ್ವಹಣೆಯಲ್ಲಿನ ಹಲವು ಹಂತಗಳಲ್ಲಿ ಇರುವ ಲೋಪಗಳು ಮತ್ತು ಲೊಕೊ ಪೈಲಟ್ ಮತ್ತು ರೈಲು ವ್ಯವಸ್ಥಾಪಕರೊಂದಿಗೆ ವಾಕಿ - ಟಾಕಿಯಂತಹ ನಿರ್ಣಾಯಕ ಸುರಕ್ಷತಾ ಸಾಧನಗಳ ಲಭ್ಯತೆಯಿಲ್ಲದಿರುವುದು ಅಪಘಾತಕ್ಕೆ ಕಾರಣ ಎಂದು ರೈಲ್ವೆ ಸುರಕ್ಷತಾ ಆಯುಕ್ತರ ವರದಿಯು ಹೇಳಿದೆ. ಸ್ವ-ಪ್ರಚಾರಕ್ಕಾಗಿ ಯಾವುದೇ ಅವಕಾಶವನ್ನು ಬಿಡದ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವರು ಭಾರತೀಯ ರೈಲ್ವೆಯನ್ನು ಬಾಧಿಸಿರುವ ಬೃಹತ್ ಲೋಪಗಳ ನೇರ ಹೊಣೆಗಾರಿಕೆಯನ್ನು ಹೊರಬೇಕು ಎಂದು ಅವರು ಆಗ್ರಹಿಸಿದ್ದಾರೆ.
ವರ್ಧಿತ ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಮತ್ತು ಅಪಘಾತಗಳನ್ನು ತಡೆಯಲು ಭಾರತದಾದ್ಯಂತ ಎಲ್ಲಾ ಮಾರ್ಗಗಳಲ್ಲಿ ‘ಕವಚ್’ ವ್ಯವಸ್ಥೆಯನ್ನು ಅಳವಡಿಸಬೇಕು ಎಂಬುದು ತಮ್ಮ ಪಕ್ಷದ ಬೇಡಿಕೆಯಾಗಿದೆ ಎಂದು ಖರ್ಗೆ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.