ಜೈಪುರ: ರಾಜಸ್ಥಾನದ ಚಿತ್ತೋರಗಢ ಜಿಲ್ಲೆಯಲ್ಲಿ ₹7 ಕೋಟಿ ಮೌಲ್ಯದ 3.5 ಕೆ.ಜಿ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿತ್ತೋರಗಢ-ನೀಮಚ್ ಹೆದ್ದಾರಿಯಲ್ಲಿ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚಿತ್ತೋರಗಢ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಜೋಶಿ ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಪೊಲೀಸ್ ಸಿಬ್ಬಂದಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದವಾಗಿ ಕಂಡುಬಂದ ಕಾರನ್ನು ನಿಲ್ಲಿಸುವಂತೆ ಸೂಚಿಸಿದರು. ಕಾರಿನ ಚಾಲಕ ನಿಲ್ಲಿಸುವ ಬದಲು, ಕಾರಿನ ವೇಗ ಹೆಚ್ಚಿಸಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ, ಪೊಲೀಸರು ಅಡ್ಡಗಟ್ಟಿ ವಾಹನವನ್ನು ನಿಲ್ಲಿಸಿದ್ದಾರೆ ಎಂದು ಜೋಶಿ ಹೇಳಿದ್ದಾರೆ.
ವಾಹನವನ್ನು ತಪಾಸಣೆ ನಡೆಸಿದಾಗ ಚಾಲಕನ ಸೀಟಿನ ಕೆಳಗೆ ಎರಡು ಬ್ಯಾಗ್‌ಗಳಲ್ಲಿ ಬಚ್ಚಿಟ್ಟಿದ್ದ 3.42 ಕೆ.ಜಿ ಎಂಡಿಎಂಎ ಪತ್ತೆಯಾಗಿದೆ. ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದ್ದು, ಚಾಲಕ ರೋಷನ್ ಲಾಲ್ ವಿಷ್ಣೋಯ್ ಅವರನ್ನು ಬಂಧಿಸಲಾಗಿದೆ. ಪ್ರಕರಣ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.