ADVERTISEMENT

ಸಂದೇಶ್‌ಖಾಲಿ ಪ್ರವೇಶಿಸದಂತೆ ಅಧೀರ್‌ ಚೌಧರಿಗೆ ತಡೆ

ಸಮಸ್ಯೆಯನ್ನು ರಾಜಕೀಯಗೊಳಿಸಲು ಮಮತಾ ಯತ್ನ; ಆರೋಪ

​ಪ್ರಜಾವಾಣಿ ವಾರ್ತೆ
Published 16 ಫೆಬ್ರುವರಿ 2024, 12:55 IST
Last Updated 16 ಫೆಬ್ರುವರಿ 2024, 12:55 IST
<div class="paragraphs"><p>ಅಧೀರ್‌ ರಂಜನ್‌ ಚೌಧರಿ</p></div>

ಅಧೀರ್‌ ರಂಜನ್‌ ಚೌಧರಿ

   

ಕೋಲ್ಕತ್ತ: ‘ಉದ್ವಿಗ್ನ ಪರಿಸ್ಥಿತಿ ಉಂಟಾಗಿರುವ ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಗೆ ವಿರೋಧ ಪಕ್ಷದ ನಾಯಕರ ಪ್ರವೇಶವನ್ನು ಏಕೆ ತಡೆಯಲಾಗುತ್ತಿದೆ’ ಎಂದು ಕಾಂಗ್ರೆಸ್‌ ಮುಖ್ಯಸ್ಥ ಅಧೀರ್‌ ರಂಜನ್‌ ಚೌಧರಿ ಅವರು ರಾಜ್ಯ ಸರ್ಕಾರವನ್ನು ಶುಕ್ರವಾರ ಪ್ರಶ್ನಿಸಿದ್ದಾರೆ.

ಚೌಧರಿ ನೇತೃತ್ವದ ಕಾಂಗ್ರೆಸ್‌ ರ‍್ಯಾಲಿಯು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್‌ಖಾಲಿ ಪ್ರವೇಶಿಸದಂತೆ ಮೊದಲಿಗೆ ಸರ್ಬೇರಿಯಾದಲ್ಲಿ ತಡೆಯಲಾಯಿತು. ಬಳಿಕ, ರಾಮ್‌ಪುರದಲ್ಲಿ ಮತ್ತೊಮ್ಮೆ ತಡೆಯಲಾಯಿತು. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತತ್ವದ ಸರ್ಕಾರವು ಸಂದೇಶ್‌ಖಾಲಿ ಸಮಸ್ಯೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಚೌಧರಿ ಅವರು ಆರೋಪಿಸಿದ್ದಾರೆ.

ADVERTISEMENT

ರ‍್ಯಾಲಿಯನ್ನು ರಾಮ್‌ಪುರದಲ್ಲಿ ತಡೆದ ಬಳಿಕ, ಚೌಧರಿ ಮತ್ತು ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 

ಅಪರಾಧಿ ಪ್ರಕ್ರಿಯಾ ಸಂಹಿತೆಯ ಸೆಕ್ಷನ್‌ 144 ಅಡಿ ಸಂದೇಶ್‌ಖಾಲಿಯಲ್ಲಿ ಪ್ರತಿಬಂಧಕಾಜ್ಞೆ ವಿಧಿಸಲಾಗಿದೆ. ಹೀಗಾಗಿ ಕಾಂಗ್ರೆಸ್‌ ತಂಡಕ್ಕೆ ಪ್ರವೇಶ ನಿರಾಕರಿಸಲಾಯಿತು ಎಂದು ರಾಜ್ಯ ಪೊಲೀಸರು ತಿಳಿಸಿದ್ದಾರೆ.

ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ ಬೆಂಬಲಿಗರು ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಸಂದೇಶ್‌ಖಾಲಿಯ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯು 8ನೇ ದಿನಕ್ಕೆ ಕಾಲಿಟ್ಟಿದೆ.

ಮಾಯಾವತಿ
ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ: ಮಾಯಾವತಿ
ಸಂದೇಶ್‌ಖಾಲಿ ಹಿಂಸಾಚಾರದ ಕುರಿತು ಕಳವಳ ವ್ಯಕ್ತಪಡಿಸಿರುವ ಬಹುಜನ ಸಮಾಜ ‍ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ಸರ್ಕಾರವನ್ನು ಆಗ್ರಹಿಸಿದ್ದಾರೆ. ‘ಸಂದೇಶ್‌ಖಾಲಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆದ ಹಿನ್ನೆಲೆಯಲ್ಲಿ ಹಿಂಸಾಚಾರ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಇಂಥ ಘಟನೆಗಳು ಮರುಕಳಿಸುವುದಿಲ್ಲ’ ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ತನಿಖೆ ಕೋರಿ ಪಿಐಎಲ್‌

ಸಂದೇಶ್‌ಖಾಲಿ ಹಿಂಸಾಚಾರ ಪ್ರಕರಣಗಳ ತನಿಖೆಯ ಜವಾಬ್ದಾರಿಯನ್ನು ಸಿಬಿಐ ಅಥವಾ ಎಸ್‌ಐಟಿಗೆ ವಹಿಸಬೇಕು. ನ್ಯಾಯಾಲಯದ ಮೇಲ್ವಿಚಾರಣೆ ತನಿಖೆ ನಡೆಯಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪಟ್ಟಿಮಾಡಲು ಪರಿಗಣಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ನ್ಯಾಯಪೀಠದೆದುರು ಈ ಪಿಐಎಲ್‌ ಕುರಿತು ಪ್ರಸ್ತಾಪಿಸಲಾಯಿತು.  ತ್ವರಿತವಾಗಿ ಅರ್ಜಿಯ ವಿಚಾರಣೆ ನಡೆಸುವಂತೆ ಕೋರಿ ಇ–ಮೇಲ್ ಕಳಿಸಿದ್ದೀರಾ ಎಂದು ಸಿಜೆಐ ಕೇಳಿದ ಪ್ರಶ್ನೆಗೆ ಅರ್ಜಿದಾರ ವಕೀಲ ಅಲಕ್‌ ಅಲೋಕ್‌ ಶ್ರೀವಾತ್ಸವ ಅವರು ಸಕಾರಾತ್ಮಕವಾಗಿ ಉತ್ತರಿಸಿದರು. ಆಗ ‘ಈ ಮಧ್ಯಾಹ್ನವೇ (ಶುಕ್ರವಾರ) ಈ ಅರ್ಜಿ ಕುರಿತು ಕ್ರಮ ಕೈಗೊಳ್ಳಲಾಗುವುದು’ ಎಂದು ಸಿಜೆಐ ಹೇಳಿದರು. ಸಂದೇಶ್‌ಖಾಲಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಕರ್ತವ್ಯಲೋಪ ಎಸಗಿದ ಪಶ್ಚಿಮ ಬಂಗಾಳ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ತನಿಖೆ ಮತ್ತು ವಿಚಾರಣೆಯನ್ನು ಪಶ್ಚಿಮ ಬಂಗಾಳದ ಹೊರಗೆ ನಡೆಸಬೇಕು ಎಂದೂ ಶ್ರೀವಾತ್ಸವ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.