ADVERTISEMENT

ಪೊಲ್ಲಾಚಿ ಪ್ರಕರಣ: ತನಿಖೆ ಕೈಗೆತ್ತಿಕೊಂಡ ಸಿಬಿಐ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2019, 18:57 IST
Last Updated 28 ಏಪ್ರಿಲ್ 2019, 18:57 IST
   

ನವದೆಹಲಿ: ತಮಿಳುನಾಡಿನ ಪೊಲ್ಲಾಚಿಯಲ್ಲಿ ಮಹಿಳೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ.

ಪುರುಷರ ಗುಂಪೊಂದು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ, ಅದನ್ನು ವಿಡಿಯೊ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎರಡು ಎಫ್‌ಐಆರ್‌ ದಾಖಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಿಳೆಗೆ ಕಿರುಕುಳ ನೀಡಿದ್ದಕ್ಕೆ ಮತ್ತು ಮಹಿಳೆಯ ಸಹೋದರನ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತ್ಯೇಕವಾಗಿ ಈ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿಕೊಳ್ಳಲಾಗಿದೆ.

ಇದೇ ಗುಂಪು ರಾಜ್ಯದಾದ್ಯಂತ ಹಲವು ಮಹಿಳೆಯರಿಗೆ ಇದೇ ರೀತಿ ಕಿರುಕುಳ ನೀಡಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಬಗ್ಗೆಯೂ ದೂರುಗಳಿವೆ. ಈ ಕಾರಣಕ್ಕಾಗಿ ಪ್ರಕರಣದ ತನಿಖೆಗೆ ಗಣ್ಯರು ಮತ್ತು ಸಾರ್ವಜನಿಕರು ಒತ್ತಾಯಿಸಿದ್ದರು. ಅಲ್ಲದೆ, ತಮಿಳುನಾಡು ಸರ್ಕಾರದ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದರು.

ADVERTISEMENT

ಲೈಂಗಿಕ ಕಿರುಕುಳಕ್ಕೆ ಒಳಗಾದ ಮಹಿಳೆ ಫೆಬ್ರುವರಿ 24ರಂದು ಪೊಲೀಸರಿಗೆ ದೂರು ನೀಡಿದ ನಂತರ ಉಳಿದ ಪ್ರಕರಣಗಳು ಬೆಳಕಿಗೆ ಬಂದಿವೆ.

ರಾಜಕೀಯ ತಿರುವು:ಸಂತ್ರಸ್ತೆಯ ಸಹೋದರನ ಮೇಲೆ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಸ್ಥಳೀಯ ಕಾರ್ಯಕರ್ತ ನಟರಾಜ ಎಂಬುವನು ಹಲ್ಲೆ ನಡೆಸಿದ್ದ ಸುದ್ದಿ ತಿಳಿಯುತ್ತಿದ್ದಂತೆ ಪ್ರಕರಣದ ರಾಜಕೀಯ ತಿರುವು ಪಡೆದುಕೊಂಡಿದೆ. ನಟರಾಜನನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಕೃತ್ಯದಲ್ಲಿ ಇವನ ಜೊತೆ ಭಾಗಿಯಾಗಿದ್ದಾರೆ ಎನ್ನಲಾದ ಶಬರಿರಾಜನ್‌, ತಿರುನವಕ್ಕರಸು, ಸತೀಶ್‌ ಮತ್ತು ವಸಂತಕುಮಾರ್‌ ಎಂಬುವರನ್ನು ಬಂಧಿಸಲಾಗಿದೆ. ಸದ್ಯ ಇವರು ನ್ಯಾಯಾಂಗ ವಶದಲ್ಲಿದ್ದಾರೆ.ತಪ್ಪಿತಸ್ಥರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷ ಡಿಎಂಕೆ, ವಿದ್ಯಾರ್ಥಿ ಸಂಘಟನೆಗಳು ರಾಜ್ಯದಾದ್ಯಂತ ಪ್ರತಿಭಟನೆ ನಡೆಸಿದ್ದವು. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಚರ್ಚೆ ಕಾವೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.