ನವದೆಹಲಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ರಾತ್ರಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಇದನ್ನು ಖಂಡಿಸಿರುವ ಹಿರಿಯ ವಕೀಲ ಪ್ರಶಾಂತ್ ಭೂಷಣ್, 'ಸಿಜೆಐ ನಿವಾಸಕ್ಕೆ ಪ್ರಧಾನಿ ಅವರ ಖಾಸಗಿ ಭೇಟಿಗೆ ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಆಘಾತಕಾರಿಯಾಗಿದ್ದು, ಕೆಟ್ಟ ಸಂದೇಶವನ್ನು ರವಾನಿಸುತ್ತದೆ' ಎಂದು ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಬರೆದುಕೊಂಡಿರುವ ಪ್ರಶಾಂತ್ ಭೂಷಣ್, 'ಇದು ಕಾರ್ಯಾಂಗದ ನಾಗರಿಕರ ಮೂಲಭೂತ ಹಕ್ಕನ್ನು ರಕ್ಷಿಸುವ ಜವಾಬ್ದಾರಿ ಹೊಂದಿರುವ ನ್ಯಾಯಾಂಗಕ್ಕೆ ಕೆಟ್ಟ ಸಂದೇಶವನ್ನು ರವಾನಿಸುತ್ತದೆ' ಎಂದು ಹೇಳಿದ್ದಾರೆ.
'ಸರ್ಕಾರವು ಸಂವಿಧಾನದ ಪರಿಧಿಯಲ್ಲಿ ಇದ್ದುಕೊಂಡು ಕಾರ್ಯನಿರ್ವಹಿಸಬೇಕು. ಅದಕ್ಕಾಗಿಯೇ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವೆ ಒಂದು ಕೈ ಅಗಲದಷ್ಟು ಅಂತರ ಕಾಯ್ದುಕೊಳ್ಳಬೇಕು' ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಿಜೆಐ ಡಿ.ವೈ.ಚಂದ್ರಚೂಡ್ ನಿವಾಸದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಗಣಪತಿ ಪೂಜೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಚಂದ್ರಚೂಡ್ ಅವರ ಪತ್ನಿ ಇದ್ದರು.
ಮಹಾರಾಷ್ಟ್ರದ ಸಾಂಪ್ರದಾಯಿಕ ಉಡುಪನ್ನು ಧರಿಸಿದ್ದ ಮೋದಿ, 'ಗಣೇಶ ದೇವರು ನಮಗೆಲ್ಲರಿಗೂ ಸಂತೋಷ, ಸಮೃದ್ಧಿ ಮತ್ತು ಆರೋಗ್ಯವನ್ನು ನೀಡಲಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಬರೆದುಕೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.