ನವದೆಹಲಿ: ತೆಲಂಗಾಣ ರಾಜ್ಯಪಾಲರಾದ ತಮಿಳ್ ಇಸೈ ಸೌಂದರರಾಜನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸದ್ಯ ಜಾರ್ಖಂಡ್ ರಾಜ್ಯಪಾಲರಾದ ಸಿ.ಪಿ ರಾಧಾಕೃಷ್ಣನ್ ಅವರನ್ನು ಹೆಚ್ಚುವರಿಯಾಗಿ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.
ಸೌಂದರರಾಜನ್ ಸೋಮವಾರ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದರು. 'ನೇರವಾಗಿ ಸಾರ್ವಜನಿಕ ಸೇವೆ ಮಾಡಬೇಕೆನ್ನುವ ಬಯಕೆಯಿಂದ ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿದ್ದೇನೆ. ಮುಂದೆ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಬಯಸುತ್ತೇನೆ' ಎಂದು ಅವರು ಹೇಳಿದ್ದಾರೆ.
2024ರ ಲೋಕಸಭೆ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಲಾಗಿದೆ ಎಂದು ವರದಿಯಾಗಿದೆ.
ಸೌಂದರರಾಜನ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ತಮಿಳುನಾಡಿನ ತೂತುಕುಡಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ ಡಿಎಂಕೆಯ ಕನಿಮೋಳಿ ವಿರುದ್ಧ ಸೋತಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.