ADVERTISEMENT

ವಿಜಯಶಂಕರ್ ಸೇರಿ 6 ಮಂದಿ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ ರಾಷ್ಟ್ರಪತಿ ಮುರ್ಮು

ಪಿಟಿಐ
Published 28 ಜುಲೈ 2024, 2:29 IST
Last Updated 28 ಜುಲೈ 2024, 2:29 IST
<div class="paragraphs"><p>ದ್ರೌಪದಿ ಮುರ್ಮು</p></div>

ದ್ರೌಪದಿ ಮುರ್ಮು

   

ನವದೆಹಲಿ: ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಮಾಜಿ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಮತ್ತು ಮೈಸೂರಿನ ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಸೇರಿದಂತೆ ಆರು ಹೊಸ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿ ಎಂದು ಪರಿಗಣಿಸಲ್ಪಟ್ಟಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಿಸಲಾಗಿದೆ.

ADVERTISEMENT

ಹರಿಭಾವು ಬಾಗಡೆ ಅವರನ್ನು ರಾಜಸ್ಥಾನದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ಗಂಗ್ವಾರ್ ಅವರು ಜಾರ್ಖಂಡ್‌ಗೆ ಹಾಗೂ ಮಾಥುರ್ ಅವರನ್ನು ಸಿಕ್ಕಿಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ತ್ರಿಪುರಾ ಮಾಜಿ ಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಅವರನ್ನು ತೆಲಂಗಾಣದ ರಾಜ್ಯಪಾಲರನ್ನಾಗಿ ನೇಮಿಸಲಾಗಿದ್ದು, ರಮೆನ್ ದೇಕಾ ಅವರು ಛತ್ತೀಸಗಢಕ್ಕೆ ಹಾಗೂ ವಿಜಯಶಂಕರ್ ಅವರು ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಉಳಿದಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂವರು ರಾಜ್ಯಪಾಲರನ್ನು ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿದೆ.

ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾಯಿಸಲಾಗಿದ್ದು, ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದೊಂದಿಗೆ ಭಿನ್ನಾಭಿಪ್ರಾಯ ಹೊಂದಿದ್ದ ಬನ್ವಾರಿಲಾಲ್ ಪುರೋಹಿತ್‌ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ.

ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರದ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿಯನ್ನು ಸಹ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.