ನವದೆಹಲಿ: ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಆರನೇ ವರ್ಷದ ಪುಣ್ಯತಿಥಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇಂದು (ಶುಕ್ರವಾರ) ಗೌರವ ಸಲ್ಲಿಸಿದ್ದಾರೆ.
ಉಪರಾಷ್ಟ್ರಪತಿ ಜಗದೀಪ್ ಧನಕರ್, ರಕ್ಷಣಾ ಸಚಿವ ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಸೇರಿದಂತೆ ಎನ್‌ಡಿಎ ಮೈತ್ರಿಕೂಟದ ಹಲವು ಗಣ್ಯರು ದೆಹಲಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿ ‘ಸದೈವ್ ಅಟಲ್’ಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ್ದಾರೆ. ಇದೇ ವೇಳೆ ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಭಟ್ಟಾಚಾರ್ಯ ಕೂಡ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು.
‘ರಾಷ್ಟ್ರ ನಿರ್ಮಾಣಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ಅಸಂಖ್ಯಾತ ಜನರು ವಾಜಪೇಯಿ ಅವರನ್ನು ಸ್ಮರಿಸುತ್ತಿದ್ದಾರೆ. ಅವರು ಜನರ ಏಳಿಗೆಗಾಗಿ ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರ ಆಶಯಗಳನ್ನು ಪೂರೈಸಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ದೇಶದ ಪ್ರಮುಖ ನಾಯಕರಲ್ಲಿ ಒಬ್ಬರು ಮತ್ತು ಭಾರತೀಯ ಜನತಾ ಪಕ್ಷದ ಸ್ಥಾಪಕ ಸದಸ್ಯರಾದ ವಾಜಪೇಯಿ ಅವರು ದೀರ್ಘಕಾಲದ ಅನಾರೋಗ್ಯದಿಂದಾಗಿ 2018ರ ಆಗಸ್ಟ್ 16ರಂದು ವಿಧಿವಶರಾಗಿದ್ದರು.
1998-2004ರವರೆಗೆ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸರ್ಕಾರವನ್ನು ಮುನ್ನಡೆಸಿದ ವಾಜಪೇಯಿ, ಬಿಜೆಪಿಯಿಂದ ರಾಷ್ಟ್ರದ ಪ್ರಧಾನ ಮಂತ್ರಿಯಾದ ಮೊದಲ ನಾಯಕ. ಅವರು ಮೂರು ಭಾರಿ ದೇಶದ ಪ್ರಧಾನಿಯಾಗಿದ್ದರು. 1996 ರಲ್ಲಿ ಮತ್ತು 1998 ರಿಂದ 2004 ರ ನಡುವೆ ಎರಡು ಅವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.
ಡಿಸೆಂಬರ್ 25ರ ಅವರ ಜನ್ಮದಿನವನ್ನು ಬಿಜೆಪಿಯು ‘ಉತ್ತಮ ಆಡಳಿತ ದಿನ’ ಎಂದು ಆಚರಿಸುತ್ತದೆ. 2014ರಲ್ಲಿ ಅವರಿಗೆ ‘ಭಾರತ ರತ್ನ’ ದೊರಕಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.