ವಯನಾಡ್(ಕೇರಳ): ವಯನಾಡ್‌ನಲ್ಲಿ ಜುಲೈ ತಿಂಗಳಲ್ಲಿ ಸಂಭವಿಸಿದ ಭೂಕುಸಿತ ದುರಂತವನ್ನು ಮುಂದಿಟ್ಟು ಬಿಜೆಪಿಯು ರಾಜಕೀಯ ಮಾಡುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಯುಡಿಎಫ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಅವರು ಸೋಮವಾರ ಸುಲ್ತಾನ್ ಬತ್ತೇರಿಯ ಕೇಣಿಚ್ಚಿರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.
‘ಭೂಕುಸಿತ ಸಂತ್ರಸ್ತರಿಗೆ ಅಗತ್ಯ ಪರಿಹಾರ ವಿತರಿಸಲು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ’ ಎಂದು ಅವರು ದೂರಿದರು.
‘ಸಂಸತ್ತಿನಲ್ಲಿ ನಿಮ್ಮನ್ನು ಪ್ರತಿನಿಧಿಸಲು ಅವಕಾಶ ನೀಡಿದರೆ, ನಾನು ನಿಮಗಾಗಿ ಬೇರೆ ಎಲ್ಲರಿಗಿಂತಲೂ ಹೆಚ್ಚು ಕೆಲಸ ಮಾಡಬಲ್ಲೆ ಎಂಬುದನ್ನು ತೋರಿಸುತ್ತೇನೆ. ನಿಮ್ಮ ಸಮಸ್ಯೆಗಳನ್ನು ಸೂಕ್ತ ವೇದಿಕೆಯಲ್ಲಿ ಹೇಳುತ್ತೇನೆ. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮೇಲೆ ಒತ್ತಡ ಹೇರುತ್ತೇನೆ’ ಎಂದು ಭರವಸೆ ನೀಡಿದರು.
‘ಬಿಜೆಪಿಯ ರಾಜಕೀಯ ಸಿದ್ಧಾಂತವು ದೇಶದಾದ್ಯಂತ ದ್ವೇಷವನ್ನು ಹರಡಿ, ಸಮಾಜದಲ್ಲಿ ವಿಭಜನೆ ಉಂಟುಮಾಡುತ್ತಿದೆ. ಜನರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಕಡೆಗಣಿಸಲಾಗುತ್ತಿದ್ದು, ಅವರ ಸಂಕಷ್ಟ ಇನ್ನೂ ಬಗೆಹರಿದಿಲ್ಲ. ನಿರುದ್ಯೋಗದ ಪ್ರಮಾಣ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ ಹಾಗೂ ಅಗತ್ಯ ವಸ್ತುಗಳ ಬೆಲೆ ನಿರಂತರವಾಗಿ ಏರುತ್ತಿದೆ’ ಎಂದರು.
ಬಿಜೆಪಿಯು ನೈಜ ಸಮಸ್ಯೆಗಳಿಂದ ನಿಮ್ಮ ಗಮನವನ್ನು ಬೇರೆಡೆ ಸೆಳೆಯುತ್ತದೆ. ಏಕೆಂದರೆ ಅಧಿಕಾರದಲ್ಲಿ ಉಳಿಯುವುದೇ ಅದರ ಏಕೈಕ ಗುರಿ.ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ಅಭ್ಯರ್ಥಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.