ನವದೆಹಲಿ: ನ್ಯಾಯಕ್ಕಾಗಿ ಹೋರಾಡುತ್ತಿರುವ ಕುಸ್ತಿಪಟುಗಳಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಕುಸ್ತಿಪಟು ಸಾಕ್ಷಿ ಮಲಿಕ್ ಅವರಿಗೆ ಭರವಸೆ ನೀಡಿದ್ದಾರೆ.
ಕುಸ್ತಿಗೆ ವಿದಾಯ ಹೇಳಿದ ಬೆನ್ನಲ್ಲೇ ಸಾಕ್ಷಿ ಮಲಿಕ್ ಅವರನ್ನು ಭೇಟಿಯಾದ ಪ್ರಿಯಾಂಕಾ ಗಾಂಧಿ, ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ಅವರಿಗೆ(ಸಾಕ್ಷಿ ಮಲಿಕ್) ತಿಳಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಪ್ರಿಯಾಂಕಾ, ‘ಕುಸ್ತಿಪಟು ಸಾಕ್ಷಿ ಮಲಿಕ್ ಅವರನ್ನು ಭೇಟಿ ಮಾಡಿದ್ದು, ಪ್ರಸಕ್ತ ಬೆಳವಣಿಗೆಯಿಂದ ಅವರು ತುಂಬಾ ನೊಂದುಕೊಂಡಿದ್ದಾರೆ. ನ್ಯಾಯ ಸಿಗುವವರೆಗೂ ಕುಸ್ತಿಗೆ ವಿದಾಯ ಹೇಳುವ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವಂತೆ ತಿಳಿಸಿದ್ದೇನೆ’ ಎಂದರು.
‘ದೇಶಕ್ಕೆ ಕೀರ್ತಿ ತಂದ ಮಹಿಳಾ ಕುಸ್ತಿಪಟುಗಳು ಬಿಜೆಪಿ ಸಂಸದರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಕಿಡಿಕಾರಿದರು.
ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)ನ ಅಧ್ಯಕ್ಷರಾಗಿ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಕುಮಾರ್ ಸಿಂಗ್ ಅವರು ಆಯ್ಕೆಯಾಗಿದ್ದು, ಇದನ್ನು ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ವಿದಾಯ ಹೇಳಿದ್ದರು.
‘ಬ್ರಿಜ್ ಭೂಷಣ್ ಅವರ ಆಪ್ತ ಡಬ್ಲ್ಯುಎಫ್ಐ ಅಧ್ಯಕ್ಷರಾಗಿ ಆಯ್ಕೆ ಆಗಿರುವುದರಿಂದ, ನಾನು ಕುಸ್ತಿ ತ್ಯಜಿಸುತ್ತೇನೆ. ಇಂದಿನಿಂದ ನೀವು ಭವಿಷ್ಯದಲ್ಲಿ ನನ್ನನ್ನು ಕುಸ್ತಿ ಕಣದಲ್ಲಿ ನೋಡುವುದಿಲ್ಲ’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.