ADVERTISEMENT

ಕಾಳ್ಗಿಚ್ಚು ತಡೆಗಟ್ಟುವಂತೆ ಕೇಂದ್ರ, ಉತ್ತರಾಖಂಡ ಸರ್ಕಾರಕ್ಕೆ ಪ್ರಿಯಾಂಕಾ ಮನವಿ

ಪಿಟಿಐ
Published 14 ಜೂನ್ 2024, 13:29 IST
Last Updated 14 ಜೂನ್ 2024, 13:29 IST
<div class="paragraphs"><p>ಪ್ರಿಯಾಂಕಾ ಗಾಂಧಿ ವಾದ್ರಾ</p></div>

ಪ್ರಿಯಾಂಕಾ ಗಾಂಧಿ ವಾದ್ರಾ

   

ಪಿಟಿಐ ಚಿತ್ರ

ನವದೆಹಲಿ: ಕಾಳ್ಗಿಚ್ಚಿನ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ಉತ್ತರಾಖಂಡ ಸರ್ಕಾರವನ್ನು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ.

ADVERTISEMENT

ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಸಿವಿಲ್‌ ಸೋಯಾಮ್‌ ಅರಣ್ಯ ವಿಭಾಗದ ಬಿನ್ಸಾರ್‌ ವನ್ಯಜೀವಿ ಅಭಯಾರಣ್ಯದಲ್ಲಿ ಬೆಂಕಿಯನ್ನು ನಂದಿಸುವಾಗ ನಾಲ್ವರು ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಈ ಹೇಳಿಕೆ ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ ಉತ್ತರಾಖಂಡದ ಅಲ್ಮೋರಾದಲ್ಲಿ ಕಾಳ್ಗಿಚ್ಚನ್ನು ನಂದಿಸಲು ಹೋದ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದು, ಅನೇಕರು ಗಾಯಗೊಂಡಿದ್ದಾರೆ. ಇದು ಅತ್ಯಂತ ದುಃಖಕರವಾದ ಸಂಗತಿಯಾಗಿದೆ. ನಾನು ಎಲ್ಲರಿಗಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರವು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ನೀಡಬೇಕು ಮತ್ತು ಸಾಧ್ಯವಿರುವ ಎಲ್ಲ ಹಂತಗಳಲ್ಲಿಯೂ ಆ ಕುಟುಂಬಗಳಿಗೆ ನೆರವು ಒದಗಿಸಬೇಕು ಎಂದು ನಾನು ವಿನಂತಿಸುತ್ತೇನೆ’ ಎಂದು ಬರೆದುಕೊಂಡಿದ್ದಾರೆ.

ಕಳೆದ ಕೆಲವು ತಿಂಗಳುಗಳಿಂದ ಉತ್ತರಾಖಂಡದ ಕಾಡುಗಳು ನಿರಂತರವಾಗಿ ಉರಿಯುತ್ತಿವೆ ಮತ್ತು ನೂರಾರು ಹೆಕ್ಟೇರ್‌ ಅರಣ್ಯ ಪ್ರದೇಶ ನಾಶವಾಗಿದೆ. ಹಿಮಾಚಲ ಪ್ರದೇಶದಲ್ಲಿಯೂ ಕಾಳ್ಗಿಚ್ಚಿನ ಘಟನೆಗಳು ವರದಿಯಾಗುತ್ತಿವೆ ಎಂದು ಪ್ರಿಯಾಂಕಾ ಹೇಳಿದ್ದಾರೆ.

‘ಹವಾಮಾನ ಬದಲಾವಣೆಯು ಹಿಮಾಲಯ ಮತ್ತು ಪರ್ವತ ಪರಿಸರದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ಕಾಳ್ಗಿಚ್ಚಿನ ಘಟನೆಗಳನ್ನು ತಡೆಗಟ್ಟಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಹಿಮಾಲಯವನ್ನು ರಕ್ಷಿಸಲು ಎಲ್ಲರ ಸಹಕಾರದೊಂದಿಗೆ ದೊಡ್ಡ ಮಟ್ಟದಲ್ಲಿ ಪರಿಣಾಮಕಾರಿ ಪ್ರಯತ್ನಗಳನ್ನು ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ನಾನು ಮನವಿ ಮಾಡುತ್ತೇನೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.