ಚಂಡೀಗಡ: ಹಾಸ್ಟೆಲ್ ವಿದ್ಯಾರ್ಥಿನಿಯರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವುದನ್ನು ಖಂಡಿಸಿ ಪಂಜಾಬ್‌ನ ಮೊಹಾಲಿಯಲ್ಲಿಖಾಸಗಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ ಎಂದು ಪೊಲೀಸರುಭಾನುವಾರ ತಿಳಿಸಿದ್ದಾರೆ.
ಲೂಧಿಯಾನ–ಚಂಡೀಗಡ ರಸ್ತೆಯಲ್ಲಿರುವ ವಿಶ್ವವಿದ್ಯಾಲಯದ ಆವರಣದಲ್ಲಿ ಮಧ್ಯರಾತ್ರಿ ಪ್ರತಿಭಟನೆ ನಡೆಸಲಾಗಿದೆ.
ವಿಡಿಯೊಗಳನ್ನು ಶೇರ್ ಮಾಡಿದ್ದ ಸಹ ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯರ ವಿಡಿಯೊಗಳನ್ನು ಚಿತ್ರೀಕರಿಸಿದ್ದ ಆಕೆ, ಶಿಮ್ಲಾದಲ್ಲಿರುವ ಯುವಕನಿಗೆ ಕಳುಹಿಸಿದ್ದರು. ಆತ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿದ್ದ.ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದೂ ಪೊಲೀಸರು ಮಾಹಿತಿ ನೀಡಿದ್ದಾರೆ.
ತಪ್ಪಿತಸ್ಥರನ್ನು ಬಿಡುವುದಿಲ್ಲ ಎಂದು ಭರವಸೆ ನೀಡಿರುವಪಂಜಾಬ್ ಶಿಕ್ಷಣ ಸಚಿವ ಹರ್‌ಜೋತ್ ಸಿಂಗ್ ಬಯಾನ್ಸ್, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತಿಯಿಂದ ವರ್ತಿಸುವಂತೆ ಮನವಿ ಮಾಡಿದ್ದಾರೆ.
'ಇದು ಸೂಕ್ಷ್ಮ ವಿಚಾರವಾಗಿದೆ. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಗೆ ಧಕ್ಕೆ ತರುವ ಕಳವಳಕಾರಿ ಸಂಗತಿಯಾಗಿದೆ. ಮಾಧ್ಯಮಗಳೂ ಸೇರಿದಂತೆ ನಾವೆಲ್ಲರೂ ಜಾಗರೂಕರಾಗಿರಬೇಕು. ಇದು ಸಮಾಜದ ಎದುರಿಗಿರುವ ಪರೀಕ್ಷೆಯೂ ಹೌದು' ಎಂದು ಟ್ವಿಟರ್ ಮೂಲಕ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.