ನವದೆಹಲಿ: ಬೆಂಗಳೂರಿನಲ್ಲಿ 2022ರಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸೋಮವಾರ ನಡೆಸಿದ ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಹಾಗೂ ಪಿ.ಕೆ.ಮಿಶ್ರಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.
ಸಿದ್ದರಾಮಯ್ಯ ಅವರಿಗೆ ₹10 ಸಾವಿರ ದಂಡ ವಿಧಿಸಿ, ಮಾರ್ಚ್ 6ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೂ ಪೀಠ ತಡೆ ನೀಡಿದೆ.
ಸರ್ಕಾರವು ಆರು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದ ಪೀಠ, ಅರ್ಜಿದಾರರ ವಿರುದ್ಧದ ಮುಂದಿನ ಪ್ರಕ್ರಿಯೆಗಳಿಗೆ ತಡೆ ನೀಡಲಾಗಿದೆ ಎಂದು ಹೇಳಿತು. ಕಾಂಗ್ರೆಸ್ ನಾಯಕರ ಪರವಾಗಿ ಹಿರಿಯ ವಕೀಲರಾದ ಕಪಿಲ್ ಸಿಬಲ್, ಅಭಿಷೇಕ್ ಮನು ಸಿಂಘ್ವಿ, ದೇವದತ್ ಕಾಮತ್ ಮತ್ತು ಸಿದ್ಧಾರ್ಥ್ ಲೂತ್ರಾ ವಾದ ಮಂಡಿಸಿದರು.
‘ಅರ್ಜಿದಾರರು ಪ್ರತಿಭಟಿಸುವ ಹಕ್ಕನ್ನು ಚಲಾಯಿಸಿದ್ದಕ್ಕಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಇದು ಸಂವಿಧಾನದ 19 (1) (ಎ) ವಿಧಿಯಲ್ಲಿ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಸಂಪೂರ್ಣ ವಿರುದ್ಧ. ಅರ್ಜಿದಾರರು ಯಾವುದೇ ಅಪರಾಧದ ಉದ್ದೇಶವಿಲ್ಲದೆ ಶಾಂತಿಯುತವಾಗಿ ರಾಜಕೀಯ ಪ್ರತಿಭಟನೆ ನಡೆಸಿದ್ದರು. ಪ್ರಜಾಪ್ರಭುತ್ವದಲ್ಲಿ ವಾಕ್ ಮತ್ತು ಪ್ರತಿಭಟನೆಯ ಸ್ವಾತಂತ್ರ್ಯದ ಹಕ್ಕು ಮಹತ್ವದ್ದು, ಅತ್ಯುನ್ನತವಾದುದು ಮತ್ತು ಅದನ್ನು ಸಂವಿಧಾನದ ಅಡಿಯಲ್ಲಿ ಖಾತರಿಪಡಿಸಲಾಗಿದೆ’ ಎಂದು ಸಿಂಘ್ವಿ ವಾದಿಸಿದರು.
ಈ ಹಂತದಲ್ಲಿ, ‘ಈ ವಾದವನ್ನು ಅಂಗೀಕರಿಸಿದರೆ, ಸಾಮಾನ್ಯ ಜೀವನಕ್ಕೆ ತೊಂದರೆಯನ್ನುಂಟು ಮಾಡುವ ಪ್ರತಿ ಸಾರ್ವಜನಿಕ ಪ್ರತಿಭಟನೆಗೆ ಸಂವಿಧಾನದ 19 (1) (ಎ) ವಿಧಿಯಲ್ಲಿ ಅವಕಾಶ ನೀಡಬೇಕಾಗುತ್ತದೆ’ ಎಂದು ಪೀಠ ಹೇಳಿತು. ‘ಈ ಪ್ರತಿಭಟನೆಯನ್ನು ರಾಜಕಾರಣಿಗಳು ಮಾಡಿದ್ದಾರೆ ಎಂದು ನೀವು ವಾದಿಸುತ್ತಿದ್ದೀರಿ. ಆ ಕಾರಣಕ್ಕೆ ಪ್ರಕರಣವನ್ನು ರದ್ದುಗೊಳಿಸಬೇಕೇ’ ಎಂದು ಪೀಠ ಪ್ರಶ್ನಿಸಿತು.
ನ್ಯಾಯಮೂರ್ತಿ ಪಿ.ಕೆ. ಮಿಶ್ರಾ, ‘ಪ್ರಕರಣದಲ್ಲಿ ಉಲ್ಲೇಖಿಸಿರುವ ಅಪರಾಧಗಳನ್ನು ಮೂಲಭೂತ ಹಕ್ಕುಗಳ ಅಡಿಯಲ್ಲಿ ಸಮಂಜಸವಾದ ನಿರ್ಬಂಧಗಳನ್ನು ಗಮನದಲ್ಲಿರಿಸಿಕೊಂಡು ಶಾಸನ ಪುಸ್ತಕದಲ್ಲಿ ಉಲ್ಲೇಖಿಸಲಾಗಿದೆ’ ಎಂದರು.
‘ಪ್ರತಿಭಟನೆ ನಡೆಸಲು ನೀವು ಅನುಮತಿ ಕೇಳಿದ್ದೀರಾ? ನೀವು ಒಂದು ದಿನ ಹಠಾತ್ತಾಗಿ ಸಾವಿರಾರು ಜನರು ಸೇರಿ ಪ್ರತಿಭಟನೆ ಮಾಡುವುದು ಹಾಗೂ ನಾವು ಪ್ರತಿಭಟನೆ ನಡೆಸುತ್ತಿರುವುದರಿಂದ ನಮಗೇನೂ ಆಗಲು ಸಾಧ್ಯವಿಲ್ಲ ಎನ್ನಲಾಗದು’ ಎಂದು ಮಿಶ್ರಾ ಹೇಳಿದರು.
ಕಪಿಲ್ ಸಿಬಲ್ ವಾದ ಮಂಡಿಸಿ, ‘ನನಗೆ ಸಾಂವಿಧಾನಿಕ ಹಕ್ಕು ಹಾಗೂ ಮೂಲಭೂತ ಹಕ್ಕು ಇದೆ. ಕಾನೂನು ಸುವ್ಯವಸ್ಥೆ ಕಾರಣಕ್ಕೆ ಮೂಲಭೂತ ಹಕ್ಕನ್ನು ನಿರಾಕರಿಸಲು ಆಗುವುದಿಲ್ಲ. ಕಾನೂನು ಸುವ್ಯವಸ್ಥೆ ಕಾರಣಕ್ಕೆ ನಿರ್ಬಂಧ ಹೇರಿದರೆ ಪ್ರತಿ ಸಾರ್ವಜನಿಕ ಪ್ರತಿಭಟನೆಯೂ ಕಾನೂನುಬಾಹಿರ ಆಗುತ್ತದೆ’ ಎಂದರು.
‘ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಉಂಟಾದಾಗ ಮಾತ್ರ ಸಭೆ ಮತ್ತು ಪ್ರತಿಭಟನೆ ಮಾಡುವ ಹಕ್ಕನ್ನು ನಿರ್ಬಂಧಿಸಬಹುದು ಮತ್ತು ಕಾನೂನು ಹಾಗೂ ಸುವ್ಯವಸ್ಥೆ ಕಾರಣಕ್ಕೆ ಅಲ್ಲ’ ಎಂದು ಅವರು ಹೇಳಿದರು.
ನಂತರ ನ್ಯಾಯಾಲಯವು ಅರ್ಜಿದಾರರ ಪರ ವಕೀಲರ ವಾದಗಳನ್ನು ದಾಖಲಿಸಿತು ಹಾಗೂ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು.
ಈ ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಡೆಸಲಾಗಿದ್ದ ಪ್ರತಿಭಟನಾ ಮೆರವಣಿಗೆ ವೇಳೆ ಕಾಂಗ್ರೆಸ್‌ನ ನಾಯಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರತಿಭಟನೆಯಿಂದ ಸಂಚಾರ ದಟ್ಟಣೆಯಾಗಿ, ಪ್ರಯಾಣಿಕರಿಗೆ ಅನನುಕೂಲವಾಗಿತ್ತು ಎಂದು ಆರೋಪಿಸಿ ಪೊಲೀಸರು ಪ್ರಕರಣ ದಾಖಲಿಸಿದ್ದರು.
‘ಪ್ರತಿಭಟನಾ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಯಾರಿಗೂ ಇದರಿಂದ ತೊಂದರೆ ಆಗಿಲ್ಲ. ಈ ಕ್ರಿಮಿನಲ್ ಪ್ರಕರಣದ ನ್ಯಾಯಿಕ ಪ್ರಕ್ರಿಯೆ ಮುಂದುವರಿಸುವುದರಿಂದ ಕಾನೂನು ದುರುಪಯೋಗ ಆಗುತ್ತದೆ’ ಎಂದು ಸಿದ್ದರಾಮಯ್ಯ ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.