ನವದೆಹಲಿ: ಮೇ 24ರಂದು ಟೊಕಿಯೊದಲ್ಲಿ ‘ಕ್ವಾಡ್’ ಶೃಂಗಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ.
ಕ್ವಾಡ್ ಸದಸ್ಯ ರಾಷ್ಟ್ರಗಳ ನಾಯಕರು, ಭೌತಿಕವಾಗಿ ನಡೆಯುತ್ತಿರುವ ಈ ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇಂಡೊ–ಪೆಸಿಫಿಕ್ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳಲು ಚೀನಾದ ಪ್ರಯತ್ನಗಳಿಗೆ ತಡೆಯೊಡ್ಡಲು ತಾವು ಬದ್ಧ ಎಂಬ ಸಂದೇಶವನ್ನು ಕ್ವಾಡ್ ಸದಸ್ಯ ರಾಷ್ಟ್ರಗಳ ನಾಯಕರು ಈ ಶೃಂಗಸಭೆ ಮೂಲಕ ರವಾನಿಸಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.
ಜಪಾನ್ ಪ್ರಧಾನಿ ಫುಮಿಯೊ ಕಿಷಿದಾ ಆತಿಥ್ಯದಲ್ಲಿ ನಡೆಯಲಿರುವ ಈ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಸಹ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.
‘ಕ್ವಾಡ್’ 2017ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು, ಟೊಕಿಯೊದಲ್ಲಿ ನಡೆಯಲಿರುವ ಶೃಂಗಸಭೆಯು ಭೌತಿಕವಾಗಿ ಆಯೋಜನೆಯಾಗುತ್ತಿರುವ ಎರಡನೇ ಸಭೆಯಾಗಿದೆ. ಮೊದಲನೇ ಸಭೆ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ವಾಷಿಂಗ್ಟನ್‌ನಲ್ಲಿ ನಡೆದಿತ್ತು.
ರಷ್ಯಾ–ಉಕ್ರೇನ್ ಯುದ್ಧವೂ ಈ ಶೃಂಗಸಭೆಯಲ್ಲಿ ಪ್ರಸ್ತಾಪವಾಗುವ ಸಾಧ್ಯತೆ ಇದೆ. ಮಾತುಕತೆ ಹಾಗೂ ರಾಜತಾಂತ್ರಿಕ ಮಾರ್ಗಗಳ ಮೂಲಕ ಉಭಯ ದೇಶಗಳು ಬಿಕ್ಕಟ್ಟನ್ನು ಬಗೆಹರಿಸಿಕೊಳ್ಳಬೇಕು ಎಂಬ ತನ್ನ ನಿಲುವನ್ನು ಭಾರತ ಈ ಸಭೆಯಲ್ಲಿ ಪುನರುಚ್ಚರಿಸಲಿದೆ. ಈ ನಿಟ್ಟಿನಲ್ಲಿ ಜಪಾನ್, ಆಸ್ಟ್ರೇಲಿಯಾ ಹಾಗೂ ಅಮೆರಿಕ ನಡೆಸುವ ಪ್ರಯತ್ನಗಳಿಗೆ ತಾನು ಕೈಜೋಡಿಸುವುದಾಗಿ ಭಾರತ ಸ್ಪಷ್ಟಪಡಿಸಲಿದೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.