ಸುಲ್ತಾನ್‌ಪುರ (ಉತ್ತರ ಪ್ರದೇಶ): ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಉತ್ತರ ಪ್ರದೇಶದ ಸುಲ್ತಾನ್‌ಪುರದಲ್ಲಿರುವ ಸಂಸದರು ಮತ್ತು ಶಾಸಕರ ನ್ಯಾಯಾಲಯಕ್ಕೆ ಇಂದು (ಶುಕ್ರವಾರ) ಹಾಜರಾಗಿದ್ದಾರೆ.
ಅರ್ಜಿದಾರರ ಹೇಳಿಕೆ ದಾಖಲಿಸಿಕೊಳ್ಳಲಾಗುವುದು ಎಂದು ಹೇಳಿದ ನ್ಯಾಯಾಲಯವು, ಅರ್ಜಿ ವಿಚಾರಣೆಯನ್ನು ಆಗಸ್ಟ್ 12ಕ್ಕೆ ಮುಂದೂಡಿದೆ. ಅಂದು ರಾಹುಲ್ ಗಾಂಧಿ ಮತ್ತೆ ನ್ಯಾಯಾಲಯಕ್ಕೆ ಹಾಜರಾಗುವ ಅಗತ್ಯವಿಲ್ಲ ಎಂದು ಕೋರ್ಟ್ ಮೂಲಗಳು ತಿಳಿಸಿವೆ.
2018ರಲ್ಲಿ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸ್ಥಳೀಯ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.
ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಜುಲೈ 26ರಂದು ತಮ್ಮ ಹೇಳಿಕೆ ದಾಖಲಿಸುವಂತೆ ರಾಹುಲ್‌ಗೆ ನ್ಯಾಯಾಲಯ ಸೂಚಿಸಿತ್ತು. 2018ರ ಫೆ.20ರಂದು ಪ್ರಕರಣದಲ್ಲಿ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.