ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸುಳ್ಳು ಭರವಸೆ, ಕೇವಲ ಪ್ರಚಾರಕ್ಕಾಗಿ ಮತ್ತು ವಂಚನೆಯ ರಾಜಕಾರಣಕ್ಕೆ ಹೆಸರುವಾಸಿಯಾಗಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
ಇಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಅವರು, ಕರ್ನಾಟಕ ಮತ್ತು ಹಿಮಾಚಲ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್, ಚುನಾವಣಾ ಸಂದರ್ಭದಲ್ಲಿ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಈ ಮೂಲಕ ಅಲ್ಲಿನ ಜನರಿಗೆ ಮೋಸ ಮಾಡಿದೆ ಎಂದು ಕಿಡಿಕಾರಿದ್ದಾರೆ.
‘ಕರ್ನಾಟಕ ಮತ್ತು ಹಿಮಾಚಲ ಪ್ರದೇಶದ ಜನರು ಕಾಂಗ್ರೆಸ್‌ಗೆ ಮತ ನೀಡಿ ಮೋಸ ಹೋಗಿದ್ದೇವೆ ಎಂದು ಭಾವಿಸುತ್ತಿದ್ದಾರೆ. ರಾಹುಲ್ ಅವರು ಕೇವಲ ಪ್ರಚಾರ ಹಾಗೂ ಸುಳ್ಳು ಭರವಸೆಗಳಿಗೆ ಉದಾಹರಣೆಯಾಗಿದ್ದಾರೆ‘ ಎಂದು ವ್ಯಂಗ್ಯವಾಡಿದ್ದಾರೆ.
ಕರ್ನಾಟಕದಲ್ಲಿ ರೈತರ ಆತ್ಮಹತ್ಯೆಯನ್ನು ಪ್ರಸ್ತಾಪಿಸಿದ ಭಾಟಿಯಾ, ಅವರ ಮತಗಳನ್ನು ಪಡೆಯಲು ಕಾಂಗ್ರೆಸ್ ನಾಟಕೀಯ ರಾಜಕೀಯದಲ್ಲಿ ತೊಡಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಒಟ್ಟು 59 ಭರವಸೆಗಳನ್ನು ನೀಡಿತ್ತು. ಅದರಲ್ಲಿ ಕೇವಲ ಎರಡನ್ನು ಮಾತ್ರ ಈಡೇರಿಸಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ರೈತರ ನಿಯೋಗವನ್ನು ಭೇಟಿ ಮಾಡಲು ರಾಹುಲ್ ಅವರಿಗೆ ಸಮಯವಿದೆ. ಆದರೆ ಕರ್ನಾಟಕದಲ್ಲಿ ಕಳೆದ 15 ತಿಂಗಳಲ್ಲಿ ಸುಮಾರು 1,200 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ. ರಾಹುಲ್ ಅವರು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಅಥವಾ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಲು ಅವರಿಗೆ ಸಮಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಮುಡಾ ಹಗರಣದ ಬಗ್ಗೆಯೂ ಪ್ರಸ್ತಾಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಹರಿಹಾಯ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.