ಶ್ರೀನಗರ: ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಕಾರ್ಯತಂತ್ರಗಳನ್ನು ರೂಪಿಸಿದೆ. ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೆ. 4ರಿಂದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.
ಸೆಪ್ಟೆಂಬರ್ 18ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಪಕ್ಷದ ಪ್ರಮುಖರು ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.
ಬುಧವಾರ (ಸೆಪ್ಟೆಂಬರ್ 4)ರಂದು ರಾಹುಲ್ ಅವರು ರಂಬನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಕಾಂಗ್ರೆಸ್ ಸಮಿತಿ (ಜೆಕೆಪಿಸಿಸಿ) ಅಧ್ಯಕ್ಷ ತಾರಿಕ್ ಹಮೀದ್ ಕರ್ರಾ ಸುದ್ದಿಸಂಸ್ಥೆ ‘ಪಿಟಿಐ’ಗೆ ತಿಳಿಸಿದ್ದಾರೆ.
ರಾಹುಲ್ ಗಾಂಧಿ ಬುಧವಾರ ಬೆಳಿಗ್ಗೆ ಜಮ್ಮುವಿಗೆ ಆಗಮಿಸಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಹಮೀದ್ ಮಾಹಿತಿ ನೀಡಿದ್ದಾರೆ.
ಈ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು 90 ಸದಸ್ಯರ ಬಲವನ್ನು ಹೊಂದಿದ್ದು, ಸೆಪ್ಟೆಂಬರ್ 18, 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.