ನವದೆಹಲಿ: ಕೇರಳದ ವಯನಾಡು ಜಿಲ್ಲೆಯ ವೆಪ್ಪಾಡಿಯಲ್ಲಿ ಸಂಭವಿಸಿದ ಭೂಕುಸಿತ ಪ್ರದೇಶಗಳಿಗೆ ಲೋಕಸಭೆ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು(ಬುಧವಾರ) ನೀಡಬೇಕಿದ್ದ ಭೇಟಿಯು ಪ್ರತಿಕೂಲ ಹವಾಮಾನ ಪರಿಸ್ಥಿತಿಯಿಂದಾಗಿ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ.
ಭೇಟಿ ರದ್ದು ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‘ನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಾಹುಲ್ ಗಾಂಧಿ, ವಯನಾಡಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಹಾಗೂ ಅಲ್ಲಿನ ಪರಿಸ್ಥಿತಿ ಅವಲೋಕಿಸಬೇಕು ಎಂದು ಯೋಚಿಸಿದ್ದೆವು. ಆದರೆ ನಿರಂತರ ಮಳೆ, ಪ್ರತಿಕೂಲ ಹವಾಮಾನದಿಂದಾಗಿ ತಲುಪುವುದು ಕಷ್ಟಕರವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರಿಂದಾಗಿ ಭೇಟಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಶೀಘ್ರವೇ ವಯನಾಡಿಗೆ ಭೇಟಿ ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ಈ ಕಷ್ಟದ ಸಮಯದಲ್ಲಿ ನಾವು ವಯನಾಡಿನ ಜನರೊಂದಿಗೆ ಇದ್ದೇವೆ ಎಂದು ಅವರು ಹೇಳಿದ್ದಾರೆ.
ವಯನಾಡಿನ ಸಹೋದರ ಸಹೋದರಿಯರೇ, ನಾವು ವಯನಾಡಿಗೆ ಬರಲು ಸಾಧ್ಯವಾಗದಿದ್ದರೂ, ಈ ದುರಂತ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ. ನಾವು ನಿಮ್ಮೆಲ್ಲರಿಗಾಗಿ ಪ್ರಾರ್ಥಿಸುತ್ತೇವೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ವಯನಾಡಿನಲ್ಲಿ ಧಾರಾಕಾರ ಮಳೆಯಿಂದಾಗಿ ಉಂಟಾದ ಭಾರಿ ಭೂಕುಸಿತದಲ್ಲಿ 130ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.