ಭೋಪಾಲ್ (ಮಧ್ಯಪ್ರದೇಶ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಅಕ್ಟೋಬರ್ 10 ಮತ್ತು 12 ರಂದು ಕ್ರಮವಾಗಿ ಮಧ್ಯಪ್ರದೇಶದಲ್ಲಿ ಪ್ರತ್ಯೇಕ ಸಾರ್ವಜನಿಕ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ತಿಳಿಸಿದ್ದಾರೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಈ ವರ್ಷದ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ. ಆಡಳಿತಾರೂಢ ಬಿಜೆಪಿ ಅಧಿಕಾರವನ್ನು ಉಳಿಸಿಕೊಳ್ಳಲು ಹವಣಿಸುತ್ತಿದ್ದರೆ, ಪ್ರತಿಪಕ್ಷಗಳು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರಯತ್ನಿಸುತ್ತಿವೆ.
ರಾಹುಲ್ ಗಾಂಧಿ ಅಕ್ಟೋಬರ್ 10 ರಂದು ಶಾಹದೋಲ್ ಜಿಲ್ಲೆಯ ಬೆಹರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ಅಕ್ಟೋಬರ್ 12 ರಂದು ಮಾಂಡ್ಲಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ನಾಥ್ ಅವರು ಪಕ್ಷದ ಇತರ ನಾಯಕರೊಂದಿಗೆ ಎರಡೂ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಮಾಧ್ಯಮ ವಿಭಾಗದ ಅಧ್ಯಕ್ಷ ಕೆ.ಕೆ ಮಿಶ್ರಾ ತಿಳಿಸಿದ್ದಾರೆ.
ಇದು ಮಧ್ಯಪ್ರದೇಶದಲ್ಲಿ ಪ್ರಿಯಾಂಕಾ ಗಾಂಧಿಯವರ 4ನೇ ಸಾರ್ವಜನಿಕ ಸಭೆಯಾಗಿದೆ. ಅಕ್ಟೋಬರ್ 5ರಂದು ಅವರು ಧಾರ್ ಜಿಲ್ಲೆಯ ಮೋಹನಖೇಡಾದಲ್ಲಿ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮುನ್ನ ಜಬಲ್‌ಪುರ ಮತ್ತು ಗ್ವಾಲಿಯರ್‌ನಲ್ಲಿ ಸಾವರ್ಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ್ದರು.
ತನ್ನ ಮೋಹನಖೇಡಾ ರ‍್ಯಾಲಿಯಲ್ಲಿ ಅವರು, ಕಾಂಗ್ರೆಸ್‌ನ ಭರವಸೆಗಳನ್ನು ಪುನರುಚ್ಚರಿಸಿದ್ದರು. ಉಚಿತ ವಿದ್ಯುತ್, ಹಳೆ ಪಿಂಚಣಿ ಯೋಜನೆ ಜಾರಿ, ಕೃಷಿ ಸಾಲ ಮನ್ನಾ, ಮಹಿಳೆಯರಿಗೆ ಮಾಸಿಕ ₹1500 ಸೇರಿದಂತೆ ಹಲವು ಭರವಸೆಗಳನ್ನು ಕಾಂಗ್ರೆಸ್ ನೀಡಿದೆ.
2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷ ಸ್ಪಷ್ಟ ಬಹುಮತ ಗಳಿಸದ ಕಾರಣ ಸಮಾಜವಾದಿ ಪಕ್ಷ (ಎಸ್‌ಪಿ), ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಸ್ವತಂತ್ರ ಅಭ್ಯರ್ಥಿಗಳ ಬೆಂಬಲದೊಂದಿಗೆ ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರವನ್ನು ರಚಿಸಿತ್ತು. 230 ಸದಸ್ಯ ಬಲದ ಸದನದಲ್ಲಿ ಕಾಂಗ್ರೆಸ್ 114 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 109 ಸ್ಥಾನಗಳನ್ನು ಗಳಿಸಿತ್ತು.
ಕಮಲ್ ನಾಥ್ ನೇತೃತ್ವದ ಸರ್ಕಾರ 15 ತಿಂಗಳ ನಂತರ ಪತನಗೊಂಡಿತು. ಕಾಂಗ್ರೆಸ್ ಶಾಸಕರಲ್ಲಿ ಹೆಚ್ಚಿನವರು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿದ್ದರು. ಹಾಗಾಗಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದರು. 2020ರ ಮಾರ್ಚ್‌ನಲ್ಲಿ ಶಿವರಾಜ್ ಸಿಂಗ್ ಚೌಹಾಣ್ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.