ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಿದ ಘಟನೆ ಬೆನ್ನಲ್ಲೇ ಪ್ರತಿಭಟನೆ ಭುಗಿಲೆದ್ದಿದೆ.
ಉದಯಪುರ ಜಿಲ್ಲೆಯಲ್ಲಿ ಮುಂದಿನ 24 ಗಂಟೆಗಳ ಕಾಲ ಅಂತರ್ಜಾಲ ಸೇವೆ ಸ್ಥಗಿತಗೊಳಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಲಾಗಿದೆ.
ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಪ್ರಕಟಿಸಿದ್ದಕ್ಕಾಗಿ ಉದಯಪುರದಲ್ಲಿ ವ್ಯಕ್ತಿಯೊಬ್ಬರ ಶಿರಚ್ಛೇದ ಮಾಡಲಾಗಿದೆ.
ಉದಯಪುರದ ಮಾಲ್ದಾಸ್ ಸ್ಟ್ರೀಟ್ ಪ್ರದೇಶದಲ್ಲಿ ಇಬ್ಬರು ಕಿಡಿಗೇಡಿಗಳು ವ್ಯಕ್ತಿಯ ಶಿರಚ್ಛೇದ ಮಾಡಿದ್ದಾರೆ. ಕೃತ್ಯದ ಬಳಿಕ ದುಷ್ಕರ್ಮಿಗಳು ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹತ್ಯೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾರೆ.
ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಗೆಹಲೋತ್
‘ಉದಯಪುರದಲ್ಲಿ ನಡೆದ ಭೀಕರ ಹತ್ಯೆಯನ್ನು ಖಂಡಿಸುತ್ತೇನೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪೊಲೀಸರು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಿದ್ದಾರೆ. ಜನರು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ಇಂಥ ಗಂಭೀರ ಅಪರಾಧ ಕೃತ್ಯಗಳಲ್ಲಿ ಶಾಮೀಲಾದವರಿಗೆ ಅತಿ ಕಠಿಣ ಶಿಕ್ಷೆ ನೀಡಲಾಗುವುದು’ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಹೇಳಿದ್ದಾರೆ.
ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ನೂಪುರ್ ಹೇಳಿಕೆ
ನೂಪುರ್ ಶರ್ಮಾ ಕೆಲವು ದಿನಗಳ ಹಿಂದೆ ಪ್ರವಾದಿ ಮಹಮ್ಮದರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದು ದೇಶದಲ್ಲಿ ಮಾತ್ರವಲ್ಲದೆ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಬಳಿಕ ನೂಪುರ್ ಶರ್ಮಾ ಅವರನ್ನು ಬಿಜೆಪಿಯಿಂದ ಅಮಾನತುಗೊಳಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.