ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು( ಸೋಮವಾರ) ಆರಂಭವಾಗಿದ್ದು, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಅನೇಕ ಸಚಿವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಸದಸ್ಯರಾಗಿ ಮೊದಲು ಪ್ರಮಾಣ ವಚನ ಸ್ವೀಕರಿಸಿದ್ದು ನಂತರ ಉಳಿದ ಸಚಿವರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ವಿದ್ಯುತ್ ಸಚಿವ ಮನೋಹರ್ ಲಾಲ್ ಖಟ್ಟರ್, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ಜಿತನ್ ರಾಮ್ ಮಾಝಿ ಸೇರಿದಂತೆ ಮೀನುಗಾರಿಕೆ ಮತ್ತು ಪಶುಸಂಗೋಪನೆ ಸಚಿವ ರಾಜೀವ್ ರಂಜನ್ ಸಿಂಗ್ ನೂತನ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು .
ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ ಕನ್ನಡದಲ್ಲಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಯಾದಲ್ಲಿ, ಬಂದರು ಮತ್ತು ಶಿಪ್ಪಿಂಗ್ ಸಚಿವ ಸರ್ಬಾನಂದ ಸೋನೋವಾಲ್ ಅಸ್ಸಾಮಿ ಭಾಷೆಯಲ್ಲಿ, ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು, ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ. ಕಿಶನ್ ರೆಡ್ಡಿ ತೆಲುಗಿನಲ್ಲಿ ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಇದಕ್ಕೂ ಮೊದಲು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.