ನವದೆಹಲಿ: ರಕ್ಷಣಾ ಕ್ಷೇತ್ರದಲ್ಲಿ ಹೊಸ ಸಂಶೋಧನೆ ಮತ್ತು ಆವಿಷ್ಕಾರಗಳನ್ನು ಕೈಗೊಳ್ಳಲು ₹499 ಕೋಟಿ ಅನುದಾನ ಒದಗಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ.
ಮುಂದಿನ ಐದು ವರ್ಷಗಳ ಅವಧಿಗೆ ಈ ಅನುದಾನ ಒದಗಿಸಲು ಉದ್ದೇಶಿಸಲಾಗಿದೆ. ರಕ್ಷಣಾ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಸುಮಾರು 300 ನವೋದ್ಯಮಗಳಿಗೆ ಹಾಗೂ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಮತ್ತು ಹೊಸ ಆವಿಷ್ಕಾರಗಳನ್ನು ಕೈಗೊಳ್ಳುವ ವ್ಯಕ್ತಿಗಳಿಗೂ ಈ ಅನುದಾನ ಒದಗಿಸಲಾಗುವುದು ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಮಿಲಿಟರಿ ಹಾರ್ಡ್‌ವೇರ್ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದನ್ನು ಕಡಿಮೆ ಮಾಡುವ ಉದ್ದೇಶವನ್ನು ಸಹ ಈ ಯೋಜನೆಯು ಹೊಂದಿದೆ. ಈ ಮೂಲಕ ರಕ್ಷಣಾ ಸಾಮಗ್ರಿಗಳ ತಯಾರಿಕೆಯಲ್ಲಿ ಭಾರತವನ್ನು ಕೇಂದ್ರ ಸ್ಥಾನವನ್ನಾಗಿ ಮಾಡುವ ಗುರಿ ಹೊಂದಲಾಗಿದೆ.
ದೇಶಿಯವಾಗಿ ವಿನೂತನ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಲು ಪ್ರೋತ್ಸಾಹ ನೀಡುವ ಉದ್ದೇಶಕ್ಕಾಗಿ ಈ ಅನುದಾನ ನೀಡಲಾಗುವುದು ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಅತಿ ಹೆಚ್ಚಿನ ಪ್ರಮಾಣದಲ್ಲಿ ಶಸ್ತ್ರಾಸ್ತ್ರ ಸಾಮಗ್ರಿಗಳನ್ನು ಭಾರತ ಆಮದು ಮಾಡಿಕೊಳ್ಳುತ್ತಿದೆ. ಹೀಗಾಗಿಯೇ, ಆಮದು ಪ್ರಮಾಣವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಈ ಕ್ರಮಗಳನ್ನು ಕೈಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.