ನವದೆಹಲಿ: 'ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ನನ್ನನ್ನು ಆಹ್ವಾನಿಸುತ್ತಾರೋ ಇಲ್ಲವೋ, ಆಹ್ವಾನಿಸದಿದ್ದರೂ ನಾನು ಹೋಗುತ್ತೇನೆ. ಯಾವಾಗ ಹೋಗುತ್ತೇನೆ ಅನ್ನೋದು ನನ್ನ ಆಯ್ಕೆ' ಎಂದು ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್‌ನ ಹಿರಿಯ ಮುಖಂಡ ಅಶೋಕ್ ಗೆಹಲೋತ್ ಹೇಳಿದ್ದಾರೆ.
ಜನವರಿ 22ರಂದು ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸುತ್ತಾರೆಯೇ ಎಂಬುದಕ್ಕೆ ಸಂಬಂಧಿಸಿದಂತೆ ಇನ್ನು ಸ್ಪಷ್ಟತೆ ಬಂದಿಲ್ಲ. ಈ ನಡುವೆ ಗೆಹಲೋತ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸುದ್ದಿಸಂಸ್ಥೆ 'ಎಎನ್‌ಐ' ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ರಾಮ ಮಂದಿರ ನಿರ್ಮಾಣದಲ್ಲಿ ರಾಜಸ್ಥಾನ ಸರ್ಕಾರ ಮಹತ್ತರ ಕೊಡುಗೆ ನೀಡಿದೆ. ಆದರೆ ಕಾಂಗ್ರೆಸ್ ಬಗ್ಗೆ ಯಾರೂ ಮಾತನಾಡಿಲ್ಲ. ಪ್ರಧಾನಿ ನರೇಂದ್ರ ಮೋದಿ ಆಗಲಿ ಅಥವಾ ಬೇರೆ ಯಾರೇ ಆಗಲಿ ಈ ಕುರಿತು ಪ್ರತಿಕ್ರಿಯಿಸಿಲ್ಲ. ಕನಿಷ್ಠ ಪಕ್ಷ ರಾಜಸ್ಥಾನ ಸರ್ಕಾರದ ಕೊಡುಗೆಯನ್ನು ನೆನಪಿಸಿಕೊಂಡು ಧನ್ಯವಾದಗಳನ್ನು ಸಲ್ಲಿಸಬಹುದಿತ್ತು ಎಂದು ಗೆಹಲೋತ್ ಹೇಳಿದ್ದಾರೆ.
ಅವರು ನನ್ನನ್ನು ಆಹ್ವಾನಿಸುತ್ತಾರೋ ಇಲ್ಲವೋ, ಆಹ್ವಾನಿಸದಿದ್ದರೂ ನಾನು ಹೋಗುತ್ತೇನೆ. ನಾನು ಯಾವಾಗ ಹೋಗಬೇಕು ಅನ್ನೋದು ನನ್ನ ಆಯ್ಕೆಯಾಗಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.
ಈ ಮೊದಲು ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾನೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.