ಕೋಲ್ಕತ್ತ: ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮೇಲಿನ ದಾಳಿ, ಹಿಂಸಾಚಾರ ಮತ್ತು ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 19 ಜನರನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬಂಧಿತರನ್ನು ನಗರದ ನ್ಯಾಯಾಲಯವು ಆಗಸ್ಟ್ 22ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣಕ್ಕೆ ಬುಧವಾರ ತಡರಾತ್ರಿ ನುಗ್ಗಿದ ದುಷ್ಕರ್ಮಿಗಳು, ಆಸ್ಪತ್ರೆಯ ಕಟ್ಟಡ, ತುರ್ತು ವಿಭಾಗ, ಶುಶ್ರೂಷೆ ಕೇಂದ್ರ, ವೈದ್ಯಕೀಯ ಯಂತ್ರೋಪಕರಣ, ಪೀಠೋಪಕರಣ, ಔಷಧ ಕೇಂದ್ರ, ಹೊರರೋಗಿ ವಿಭಾಗ ಮತ್ತು ಇತರ ವೈದ್ಯಕೀಯ ಸಲಕರಣೆಗಳನ್ನು ಧ್ವಂಸಗೊಳಿಸಿದ್ದರು.
ಹಿಂಸಾಚಾರದಲ್ಲಿ ಪೊಲೀಸರು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದರು.
ಆಗಸ್ಟ್ 9ರಂದು ನಡೆದಿದ್ದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆಯನ್ನು ವಿರೋಧಿಸಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿತ್ತು.
ಏತನ್ಮಧ್ಯೆ ಆಸ್ಪತ್ರೆಯ ಆವರಣದಲ್ಲಿ ನಡೆಯುತ್ತಿರುವ ಕಿರಿಯ ವೈದ್ಯರ ಪ್ರತಿಭಟನೆಯು ಶುಕ್ರವಾರವೂ ಮುಂದುವರಿಯಿತು. ತಪ್ಪಿತ್ತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಹೆಚ್ಚಿನ ಭದ್ರತೆಯನ್ನು ಧರಣಿ ನಿರತ ವೈದ್ಯರು ಒತ್ತಾಯಿಸಿದ್ದಾರೆ.
ಹಿಂಸಾಚಾರ ಹಾಗೂ ವಿಧ್ವಂಸಕ ಕೃತ್ಯದಂತಹ ಘಟನೆಗಳು ನಡೆದಾಗ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ರಾಜ್ಯದ ವಿರೋಧ ಪಕ್ಷಗಳು ಆರೋಪಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.