ಧರ್ಮಾವರಂ(ಆಂಧ್ರಪ್ರದೇಶ): ‘ಚುನಾವಣೆಯಲ್ಲಿ ಗೆದ್ದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ಮುಂದುವರೆಸುತ್ತೇವೆ’ ಎಂದು ತೆಲುಗು ದೇಶಂ ಪಕ್ಷದ(ಟಿಡಿಪಿ) ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಹೇಳಿದರು.
‘ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಗೆ ಮೊದಲಿನಿಂದಲೂ ನಮ್ಮ ಬೆಂಬಲವಿದ್ದು, ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ಮುಂದುವರೆಸುತ್ತೇವೆ’ ಎಂದು ಸುದ್ದಿಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದರು.
ಚುನಾವಣಾ ಸಿದ್ದತೆ ಬಗ್ಗೆ ಮಾತನಾಡಿದ ಅವರು, ’ರಾಜ್ಯದಲ್ಲಿ ವೈಎಸ್ಆರ್ ಕಾಂಗ್ರೆಸ್ ವಿರೋಧಿ ಅಲೆ ಇದೆ. 25 ಲೋಕಸಭಾ ಕ್ಷೇತ್ರಗಳಲ್ಲಿ 24 ಕ್ಷೇತ್ರಗಳಲ್ಲಿ ಟಿಡಿಪಿ ಗೆಲ್ಲಲಿದೆ. 175 ವಿಧಾನಸಭಾ ಕ್ಷೇತ್ರಗಳಲ್ಲಿ 160ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದ್ದೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಮತ್ತು ಟಿಡಿಪಿ ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷಗಳಾಗಿದ್ದು, ಬಿಜೆಪಿ ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಗುರಿ ಇದೆ ಎಂದು ಗೃಹಸಚಿವ ಅಮಿತ್ ಶಾ ಅವರು ಈಗಾಗಲೇ ಹೇಳಿದ್ದಾರೆ.
ಆಂಧ್ರ ಪ್ರದೇಶದಲ್ಲಿ ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.