ಮುಂಬೈ: ‘ನಿಮಗೆ ಧೈರ್ಯವಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನ ವರ್ಲಿ ಕ್ಷೇತ್ರದಿಂದ ನನ್ನ ವಿರುದ್ಧ ಸ್ಪರ್ಧಿಸಿ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಅವರಿಗೆ ಮಾಜಿ ಸಚಿವ ಆದಿತ್ಯ ಠಾಕ್ರೆ ಸವಾಲು ಹಾಕಿದ್ದಾರೆ.
ಏಕನಾಥ್ ಶಿಂದೆ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಅವರು (ಶಿಂದೆ) ತಾವು ಅತ್ಯಂತ ಜನಪ್ರಿಯ ಮತ್ತು ಪ್ರಬಲರಾಗಿದ್ದೇವೆ ಎಂದು ಭಾವಿಸುವುದಾದರೆ ಧೈರ್ಯವಾಗಿ ಚುನಾವಣೆ ಎದುರಿಸಬೇಕು’ ಎಂದಿದ್ದಾರೆ.
‘ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನನ್ನ ವಿರುದ್ಧ ಸ್ಪರ್ಧಿಸುವಂತೆ ‘ಅಸಾಂವಿಧಾನಿಕ ಸಿಎಂ’ಗೆ (ಶಿಂದೆ) ಸವಾಲು ಹಾಕಿದ್ದೇನೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಕ್ಕೆ ಸಿದ್ಧನಿದ್ದೇನೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ನನ್ನ ವಿರುದ್ಧ ಸ್ಪರ್ಧಿಸಲಿ’ ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ, ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿ ನಡೆದುಕೊಂಡು ಕಳೆದ ವರ್ಷ ಶಿಂದೆ ಅವರೊಂದಿಗೆ ಕೈಜೋಡಿಸಿ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಿದವರಿಗೆ ಧೈರ್ಯವಿದ್ದರೆ ತಮ್ಮ ಸ್ವಂತ ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧಿಸುವಂತೆ ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.
ಆದಿತ್ಯ ಠಾಕ್ರೆ ಅವರ ಭಾಷಣದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.