ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಕಳೆದ ವರ್ಷ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ರೈತರಿಗೆ ಪರಿಹಾರ ಮತ್ತು ಮೃತರಾದ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ಭರವಸೆಯನ್ನು ರಾಜ್ಯ ಸರ್ಕಾರ ಇನ್ನೂ ಪೂರ್ಣಗೊಳಿಸದ ಕುರಿತು ರಾಜ್ಯಸಭೆಯಲ್ಲಿ ಪ್ರಶ್ನಿಸಲಾಗಿದೆ. ತಕ್ಷಣ ಸಂತ್ರಸ್ತರಿಗೆ ಪರಿಹಾರ ಒದಗಿಸುವಂತೆ ಒತ್ತಾಯಿಸಲಾಗಿದೆ.
ಶುಕ್ರವಾರ ಶೂನ್ಯ ವೇಳೆಯಲ್ಲಿ ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ)ಯ ಜಯಂತ್ ಚೌಧರಿ ಈ ವಿಚಾರವನ್ನು ಪ್ರಸ್ತಾಪಿಸಿದರು. ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ವಾಹನ ಹತ್ತಿಸಿದ ಪ್ರಕರಣದಲ್ಲಿ ಮೃತರಾದ ನಾಲ್ವರು ರೈತರ ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹಾಗೂ ಗಾಯಗೊಂಡವರಿಗೆ ₹10 ಲಕ್ಷ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು ಎಂದು ನೆನಪು ಮಾಡಿಕೊಟ್ಟರು.
ಇದೇ ವಾರ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಟ್ಟ ಉತ್ತರದಲ್ಲಿ ಭರವಸೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯಾವುದೇ ಕ್ರಮ ಕೈಗೊಳ್ಳದಿರುವುದು ತಿಳಿದುಬಂದಿದೆ ಎಂದು ಜಯಂತ್ ಚೌಧರಿ ಹೇಳಿದರು.
ಭರವಸೆಗಳನ್ನು ಪೂರೈಸುವ ನಿಟ್ಟಿನಲ್ಲಿ ಯಾಕೆ ಇದುವರೆಗೆ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಚೌಧರಿ ಪ್ರಶ್ನಿಸಿದರು. ತಕ್ಷಣ ಸಂತ್ರಸ್ತರಿಗೆ ಪರಿಹಾರ ಹಾಗೂ ಮೃತ ರೈತರ ಕುಟುಂಬ ಸದಸ್ಯರಿಗೆ ಉದ್ಯೋಗ ಒದಗಿಸಬೇಕು ಎಂದು ಒತ್ತಾಯಿಸಿದರು.
2021ರ ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ವಿರುದ್ಧ ಪ್ರತಿಭಟನೆಗೆ ಇಳಿದಿದ್ದ ರೈತರ ಮೇಲೆ ವಾಹನ ಹರಿಸಲಾಗಿತ್ತು. ಹಿಂಸಾಚಾರದಲ್ಲಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.