ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಅಲ್ಲಿನ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ನಡುವಿನ ಭಿನ್ನಾಭಿಪ್ರಾಯವು ಗಂಭೀರ ಸ್ವರೂಪದ ಬಿಕ್ಕಟ್ಟಾಗಿ ಪರಿಣಮಿಸುವ ಸಾಧ್ಯತೆ ಇರುವ ಕಾರಣ, ಇಬ್ಬರೂ ನಾಯಕರಿಗೆ ಲಗಾಮು ಹಾಕಲು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖರು ಮುಂದಾಗಿದ್ದಾರೆ. ಉತ್ತರ ಪ್ರದೇಶದ ಹತ್ತು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಶೀಘ್ರವೇ ನಡೆಯಲಿದೆ.
ಉತ್ತರ ಪ್ರದೇಶದ ಪೂರ್ವ ಭಾಗದ ಪ್ರಮುಖ ಆರ್‌ಎಸ್‌ಎಸ್ ನಾಯಕರೊಬ್ಬರು ಮೌರ್ಯ ಅವರನ್ನು ಎರಡು ದಿನಗಳ ಹಿಂದೆ ಭೇಟಿ ಮಾಡಿದ್ದಾರೆ, ಮೌರ್ಯ ಅವರು ಈಚೆಗೆ ನಡೆದ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸಿದ್ದ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ಹೇಳಿವೆ. ‘ನೀವು ಪ್ರಸ್ತಾಪಿಸಿದ ವಿಚಾರಗಳನ್ನು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು’ ಎಂದು ಆರ್‌ಎಸ್‌ಎಸ್ ನಾಯಕರು ಮೌರ್ಯ ಅವರಿಗೆ ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಆದರೆ, ಅಸಮಾಧಾನವನ್ನು ಸಾರ್ವಜನಿಕವಾಗಿ ವ್ಯಕ್ತಪಡಿಸಬಾರದು ಎಂದು ಮೌರ್ಯ ಅವರಿಗೆ ತಾಕೀತು ಮಾಡಿದ್ದಾರೆ ಎಂದು ಮೂಲಗಳು ವಿವರಿಸಿವೆ. ಬಿಕ್ಕಟ್ಟನ್ನು ಪರಿಹರಿಸುವ ಉದ್ದೇಶದಿಂದ ವಿಶ್ವ ಹಿಂದೂ ಪರಿಷತ್ತಿನ (ವಿಎಚ್‌ಪಿ) ನಾಯಕರೊಬ್ಬರು ಕೂಡ ಬಿಜೆಪಿಯ ಹಿರಿಯ ಮುಖಂಡರನ್ನು ಭೇಟಿ ಮಾಡಿದ್ದಾರೆ ಎಂದು ಗೊತ್ತಾಗಿದೆ.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿದ್ದ ಮೌರ್ಯ ಅವರು, ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದರು. ಪಕ್ಷದ ಸಾಮಾನ್ಯ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಸೂಕ್ತ ಗೌರವ ಸಿಗುತ್ತಿಲ್ಲ, ಪಕ್ಷದ ಸಂಘಟನೆಯನ್ನು ನಿರ್ಲಕ್ಷ್ಯ ಮಾಡಿರುವುದು ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಹಿನ್ನಡೆ ಕಾಣುವುದಕ್ಕೆ ಒಂದು ಕಾರಣ ಎಂದು ಅವರು ಹೇಳಿದ್ದರು.
ಇದಾದ ಕೆಲವು ದಿನಗಳ ನಂತರ ಮೌರ್ಯ ಅವರು ಆದಿತ್ಯನಾಥ ಅವರನ್ನು ಗುರಿಯಾಗಿಸಿಕೊಂಡು ಮತ್ತೆ ವಾಗ್ದಾಳಿ ನಡೆಸಿದರು. ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಸುವಾಗ ಎಸ್‌ಸಿ, ಎಸ್‌ಟಿ ಮತ್ತು ಒಬಿಸಿ ಸಮುದಾಯಗಳಿಗೆ ಮೀಸಲಾತಿಯನ್ನು ಕಲ್ಪಿಸುವ ನಿಯಮಗಳ ಪಾಲನೆ ಆಗಿದೆಯೇ ಎಂದು ಪ್ರಶ್ನಿಸಿದ್ದರು.ಬೇರೆ ಬೇರೆ ಜಿಲ್ಲೆಗಳ ಉಸ್ತುವಾರಿ ಹೊತ್ತಿರುವ ಸಚಿವರು ಪಕ್ಷದ ಸ್ಥಳೀಯ ಮುಖಂಡರ ಜೊತೆ ಸಭೆ ನಡೆಸಬೇಕು, ಅವರ ಕಳವಳಗಳಿಗೆ ಸ್ಪಂದಿಸಬೇಕು ಎಂದು ಆದಿತ್ಯನಾಥ ಅವರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದಿತ್ಯನಾಥ ಅವರು ನೀತಿ ಆಯೋಗದ ಸಭೆಯೊಂದರಲ್ಲಿ ಭಾಗಿಯಾಗಲು ಶುಕ್ರವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ಅವರು ಅಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.