ಅಜ್ಮೀರ್: ಅಜ್ಮೀರ್ ಬಳಿ ಸಬರಮತಿ– ಆಗ್ರಾ ಸೂಪರ್‌ಫಾಸ್ಟ್ ರೈಲಿನ ನಾಲ್ಕು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲು ಆಗ್ರಾಕ್ಕೆ ತೆರಳುತ್ತಿತ್ತು. ಅಜ್ಮೀರ್ ನಿಲ್ದಾಣವನ್ನು ದಾಟಿ ಮದರ್ ನಿಲ್ದಾಣಕ್ಕೆ ಹೋಗುತ್ತಿದ್ದಾಗ ಬೆಳಗಿನ ಜಾವ 1 ಗಂಟೆಯ ಹೊತ್ತಿಗೆ ರೈಲಿನ 4 ಬೋಗಿಗಳು ಹಳಿ ತಪ್ಪಿವೆ. ರೈಲು ಹಳಿ ತಪ್ಪಲು ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ ಎಂದು ವಾಯವ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಶಿ ಕಿರಣ್ ಪಿಟಿಐಗೆ ತಿಳಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಹಳಿಯನ್ನು ದುರಸ್ಥಿ ಮಾಡಲಾಗುತ್ತಿದೆ. ಅಜ್ಮೀರ್ ನಿಲ್ದಾಣದಲ್ಲಿ ಸಹಾಯವಾಣಿಯನ್ನು ಸ್ಥಾಪಿಸಲಾಗಿದ್ದು, ರೈಲಿನಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಬಂಧಿಗಳಿಗಾಗಿ ಸಹಾಯವಾಣಿಯನ್ನು ಸಹ ಬಿಡುಗಡೆ ಮಾಡಲಾಗಿದೆ. ಅಲ್ಲದೆ, ಘಟನೆ ನಡೆದ ಮಾರ್ಗವಾಗಿ ಸಂಚರಿಸಬೇಕಾಗಿದ್ದ ಆರು ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಎರಡು ರೈಲುಗಳನ್ನು ಬೇರೆ ಮಾರ್ಗಗಳಲ್ಲಿ ಸಂಚರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಕಿರಣ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.