ಲಖನೌ: ಬಹುಜನ ಸಮಾಜವಾದಿ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಅವರ ವಿರುದ್ಧ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ರಾಜೇಶ್ ಚೌಧರಿ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ.
‘ಮಾಯಾವತಿ ಅವರು ನಾಲ್ಕು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ನಾವು (ಬಿಜೆಪಿ) ಅವರನ್ನು ಮೊದಲ ಬಾರಿಗೆ ಮುಖ್ಯಮಂತ್ರಿಯನ್ನಾಗಿ ಮಾಡುವ ಮೂಲಕ ತಪ್ಪು ಮಾಡಿದ್ದೇವೆ. ಅವರು ರಾಜ್ಯದ ಅತ್ಯಂತ ಭ್ರಷ್ಟ ಮುಖ್ಯಮಂತ್ರಿ’ ಎಂದು ಮಥುರಾ ಜಿಲ್ಲೆಯ ಮಾಂಟ್‌ನ ಬಿಜೆಪಿ ಶಾಸಕ ರಾಜೇಶ್ ಚೌಧರಿ ವಿಡಿಯೊವೊಂದರಲ್ಲಿ ಹೇಳಿದ್ದಾರೆ.
ಈ ವಿಡಿಯೊ ತುಣಕನ್ನು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅಖಿಲೇಶ್, ‘ಮಹಿಳೆಯ ಘನತೆಗೆ ಕಳಂಕ ತರುವ ಹಕ್ಕು ಯಾರಿಗೂ ಇಲ್ಲ. ಮಾಯಾವತಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದು ತಪ್ಪು ಎಂದು ಬಿಜೆಪಿ ಶಾಸಕರೊಬ್ಬರು ಹೇಳಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಇದು ಜನಾಭಿಪ್ರಾಯಕ್ಕೆ ಮಾಡಿದ ಅಪಮಾನ. ಭ್ರಷ್ಟಾಚಾರಿ ಎಂದಿದ್ದಾರೆ. ಈ ಹೇಳಿಕೆಯ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಬೇಕು’ ಎಂದು ಅಖಿಲೇಶ್ ತಿಳಿಸಿದ್ದಾರೆ.
ಚೌಧರಿ ಆರೋಪಕ್ಕೆ ಪ್ರತಿಕ್ರಿಯಿಸಿರುವುದಕ್ಕೆ ಅಖಿಲೇಶ್ ಅವರಿಗೆ ಪಕ್ಷವು ಕೃತಜ್ಞತೆ ಸಲ್ಲಿಸಲಿದೆ ಎಂದು ಬಿಎಸ್‌ಪಿ ಅಧ್ಯಕ್ಷರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.