ಸಾರಣ್/ಪಟ್ನಾ: ಬಿಹಾರದ ಸಾರಣ್ ಲೋಕಸಭಾ ಕ್ಷೇತ್ರದಲ್ಲಿ ಮತದಾನದ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ದಾಖಲಾಗಿರುವ ಎಫ್ಐಆರ್‌ನಲ್ಲಿ ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಪುತ್ರಿ, ರೋಹಿಣಿ ಆಚಾರ್ಯ ಅವರ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ರೋಹಿಣಿ ಅವರು ಸಾರಣ್ ಕ್ಷೇತ್ರದಲ್ಲಿ ‘ಮಹಾಘಟಬಂಧನ್’ ಅಭ್ಯರ್ಥಿಯಾಗಿ, ಬಿಜೆಪಿಯ ರಾಜೀವ್ ಪ್ರತಾಪ್ ರೂಡಿ ವಿರುದ್ಧ ಸ್ಪರ್ಧಿಸಿದ್ದರು.
ಮನೋಜ್ ಕುಮಾರ್ ಎಂಬುವವರು ನೀಡಿರುವ ದೂರನ್ನು ಆಧರಿಸಿ ರೋಹಿಣಿ ಅವರ ಹೆಸರನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗಲಭೆ ನಡೆದ ಪ್ರದೇಶದಲ್ಲಿ ಮೇ 25ರ ವರೆಗೆ ರಾಜ್ಯ ಸರ್ಕಾರವು ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ. ಹಿಂಸಾಚಾರದಲ್ಲಿ ಒಬ್ಬರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ.
ಮತದಾನದ ದಿನ ನಡೆದ ಅಕ್ರಮಗಳಿಗೆ ಹಾಗೂ ಬಳಿಕ ನಡೆದ ಗಲಭೆಗೆ ಸಂಬಂಧಿಸಿ ಪೊಲೀಸರು ಒಟ್ಟು ನಾಲ್ಕು ಎಫ್‌ಐಆರ್‌ಗಳನ್ನು ದಾಖಲಿಸಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
‘ಗಲಭೆ ನಡೆದ ಪ್ರದೇಶಗಳಲ್ಲಿ ಭದ್ರತಾಪಡೆಗಳನ್ನು ನಿಯೋಜಿಸಲಾಗಿದ್ದು, ಪರಿಸ್ಥಿತಿ ಶಾಂತವಾಗಿದೆ’ ಎಂದು ಜಿಲ್ಲಾಧಿಕಾರಿ ಅಮನ್ ಸಮೀರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.