ನವದೆಹಲಿ: ‘ಉಕ್ಕಿನ ಮನುಷ್ಯ ಎಂದೇ ಬಿರುದಾಂಕಿತರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ (ಅ. 29) ಸಂದರ್ಭದಲ್ಲಿ ಆಯೋಜಿಸಲಾಗುತ್ತಿರುವ ‘ಏಕತೆಗಾಗಿ ಓಟ’ದಲ್ಲಿ ಸಂಸದರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಬೇಕು’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗ್ರಹಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ #Sardar150 ಹ್ಯಾಷ್‌ಟ್ಯಾಗ್ ಬಳಸಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಆಲೋಚನೆಗಳು ಮತ್ತು ಕೊಡುಗೆಗಳನ್ನು ಜನರಿಗೆ ಹೆಚ್ಚಾಗಿ ಪ್ರಚಾರ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರಿಗೆ ಹೇಳಿದ್ದಾರೆ.
‘ರಾಷ್ಟ್ರೀಯ ಏಕತಾ ದಿನವಾಗಿ ಆಚರಿಸುವ ಈ ಕಾರ್ಯಕ್ರಮದಲ್ಲಿ ಆರೋಗ್ಯ ಕಾಪಾಡಿಕೊಂಡು ಸದೃಢರಾಗಿರುವ ನಿಟ್ಟಿನಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲೇಬೇಕು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಾಡಬೇಕು’ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ.
‘ಸಾರ್ವಜನಿಕರು, ಬಿಜೆಪಿ ಸಂಸದರು, ಶಾಸಕರು, ಪಕ್ಷದ ಮುಖಂಡರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸರ್ದಾರ್ ಪಟೇಲ್ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ದೇಶದಲ್ಲಿ ಏಕತೆ ಹಾಗೂ ಸಮಗ್ರತೆಯನ್ನು ಸ್ಥಾಪಿಸಿದ ಸರ್ದಾರ್ ಪಟೇಲ್ ಅವರ ಅಸಾಧಾರಣ ಕಾರ್ಯವು ಪ್ರತಿಯೊಬ್ಬರಿಗೂ ಸ್ಫೂರ್ತಿಯ ಮೂಲವಾಗಿದೆ. ಅದನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಸಲವನ್ನು ಮಾಡಬೇಕು’ ಎಂದು ನಡ್ಡಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.