ADVERTISEMENT

ಡಿಕೆಶಿ ವಿರುದ್ಧದ CBI ತನಿಖೆ ಹಿಂಪಡೆದ ರಾಜ್ಯ; ವಿಚಾರಣೆಯನ್ನು 4ವಾರ ಮುಂದೂಡಿದ SC

ಪಿಟಿಐ
Published 4 ನವೆಂಬರ್ 2024, 10:50 IST
Last Updated 4 ನವೆಂಬರ್ 2024, 10:50 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಾಲ್ಕು ವಾರಗಳಿಗೆ ಮುಂದೂಡಿದೆ.

ನ್ಯಾ. ಸೂರ್ಯ ಕಾಂತ್ ಹಾಗೂ ನ್ಯಾ. ಉಜ್ಜಲ್‌ ಭುಯನ್ ಅವರಿದ್ದ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂದು ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾ ಅವರು ಪೀಠದ ಗಮನಕ್ಕೆ ತಂದರು.

ADVERTISEMENT

ಪ್ರಕರಣದ ತನಿಖೆಯ ಹೊಣೆ ಸಿಬಿಐಗೆ ನೀಡಿದ್ದು ಹಿಂಪಡೆದಿದ್ದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಆರ್. ಪಾಟೀಲ ಯತ್ನಾಳ ಅವರ ಅರ್ಜಿಯೂ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ.

ಇದಕ್ಕೆ ಸಂಬಂಧಿಸಿದಂತೆ ಸೆ. 17ರಂದು ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ಇದಕ್ಕೆ ಉತ್ತರಿಸಲು ಶಿವಕುಮಾರ್ ಪರ ವಕೀಲ ರಂಜಿತ್ ಕುಮಾರ್ ಕಾಲಾವಕಾಶ ಕೇಳಿರುವುದರಿಂದ ಸಿಬಿಐ ಮನವಿಯ ವಿಚಾರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂಬ ಅಂಶವನ್ನು ತುಷಾರ್ ಮೆಹ್ತಾ ಅವರು ನ್ಯಾಯಾಲಯದ ಗಮನಕ್ಕೆ ತಂದರು. 

ಏನಿದು ಪ್ರಕರಣ..?: 2013ರಿಂದ 2018ರವರೆಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಒಟ್ಟು ₹74.93 ಕೋಟಿಯಷ್ಟು ಆದಾಯಕ್ಕಿಂತ ಹೆಚ್ಚಿನ ಹಣ ಗಳಿಕೆ ಪ್ರಕರಣವನ್ನು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. ಆದರೆ 2023ರಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪ್ರಕರಣವನ್ನು ಲೋಕಾಯುಕ್ತಕ್ಕೆ ವಹಿಸಿತ್ತು.

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯನ್ನು ತನ್ನಿಂದ ಹಿಂಪಡೆದಿರುವುದನ್ನು ಸಿಬಿಐ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಆದರೆ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.