ನವದೆಹಲಿ: 1984ರ ಸಿಖ್ ವಿರೋಧಿ ಗಲಭೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರ ಆರೋಗ್ಯ ಸ್ಥಿತಿ ಪರಿಶೀಲಿಸಿ, ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ.
ವೈದ್ಯಕೀಯ ಆಧಾರದ ಮೇಲೆ ಮಧ್ಯಂತರ ಜಾಮೀನಿಗಾಗಿ ಸಜ್ಜನ್ ಕುಮಾರ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಹೃಷಿಕೇಶ್ ರಾಜ್ ಅವರನ್ನೊಳಗೊಂಡ ಪೀಠ, ಒಂದು ವಾರದೊಳಗೆ, ಕುಮಾರ್ ಅವರ ಆರೋಗ್ಯ ಪರಿಸ್ಥಿತಿ ಕುರಿತು ವರದಿ ಸಲ್ಲಿಸುವಂತೆ ಸಿಬಿಐಗೆ ನೋಟಿಸ್ ನೀಡಿದೆ.
ಮಾಜಿ ಸಂಸದರೂ ಆಗಿರುವ ಸಜನ್ ಕುಮಾರ್ ಅವರ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹಿರಿಯ ವಕೀಲ ವಿಕಾಸ್ ಸಿಂಗ್, ‘ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುಮಾರ್ ಅವರ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಬೇಕಿದೆ‘ ಎಂದು ಪೀಠಕ್ಕೆ ತಿಳಿಸಿದರು.
ಈ ವಾದವನ್ನು ಆಲಿಸಿದ ಪೀಠ, ‘ಸಜ್ಜನ್ ಕುಮಾರ್ ಅವರ ಆರೋಗ್ಯದ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕಿದೆ‘ ಎಂದು ಹೇಳಿತು.
‘ಈ ಹಿಂದೆ, ಸಜ್ಜನ್ ಕುಮಾರ್ ಅವರಿಗೆ ಖಾಸಗಿ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡಿದ್ದರು‘ ಎಂದು ವಿಕಾಸ್ ಸಿಂಗ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.