ನವದೆಹಲಿ: ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಸೇರಿದ ಈಶಾ ಪ್ರತಿಷ್ಠಾನದಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂದು ವ್ಯಕ್ತಿಯೊಬ್ಬರು ದಾಖಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ.
ವ್ಯಕ್ತಿಯ ಇಬ್ಬರು ಪುತ್ರಿಯರು ವಯಸ್ಕರಾಗಿದ್ದು, ಸ್ವಯಂ ಪ್ರೇರಣೆಯಿಂದ ಆಶ್ರಮದಲ್ಲಿ ನೆಲೆಸಿದ್ದಾರೆ ಎಂದು ಸ್ವತಃ ಅವರೇ ನ್ಯಾಯಾಲಯಕ್ಕೆ ಹೇಳಿದ್ದಾರೆ. ಮದ್ರಾಸ್ ಹೈಕೋರ್ಟ್‌ನಲ್ಲಿ ಇದೇ ವಿಷಯ ಕುರಿತು ಈ ಮೊದಲೇ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದ್ದರಿಂದ, ಅದನ್ನು ಸುಪ್ರೀಂ ಕೋರ್ಟ್ ಮುಂದುವರಿಸುವುದು ಅನಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪೀಠ ಅಭಿಪ್ರಾಯಪಟ್ಟಿದೆ.
ತನ್ನ ಮಕ್ಕಳನ್ನು ಅಕ್ರಮವಾಗಿ ವಶದಲ್ಲಿರಿಸಿಕೊಳ್ಳಲಾಗಿದೆ. ಹೀಗಾಗಿ ಅವರನ್ನು ನ್ಯಾಯಪೀಠದ ಮುಂದೆ ಹಾಜರುಪಡಿಸಲು ಪೊಲೀಸರಿಗೆ ನಿರ್ದೇಶನ ನೀಡಬೇಕು ಎಂದು ಕೋರಿದ ಅರ್ಜಿ ಇದಾಗಿತ್ತು.
ಯುವತಿಯರನ್ನು ಪತ್ತೆ ಮಾಡಲು ಮದ್ರಾಸ್ ಹೈಕೋರ್ಟ್‌ನ ಆದೇಶದಂತೆ ಆಶ್ರಮದ ಶೋಧಕ್ಕೆ ಮುಂದಾಗಿದ್ದ ಪೊಲೀಸರು ಮುಂದಿನ ಆದೇಶದವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸುಪ್ರೀಂ ಕೋರ್ಟ್ ಅ. 3ರಂದು ನಿರ್ದೇಶಿಸಿತ್ತು. ಇದೀಗ ಪ್ರಕರಣವನ್ನು ಮುಕ್ತಾಯಗೊಳಿಸಿದೆ.
ನ್ಯಾ. ಜೆ.ಬಿ. ಪರ್ದಿವಾಲಾ, ನ್ಯಾ. ಮನೋಜ್ ಮಿಶ್ರಾ ಪೀಠದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.