ನವದೆಹಲಿ: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಅವರನ್ನು ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಿಲುಕಿಸುವ ‘ವಿಸ್ತೃತ ಸಂಚಿನ’ ಕುರಿತು ತಾನು ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಪ್ರಕರಣವನ್ನು ಸುಪ್ರೀಂಕೋರ್ಟ್ ಗುರುವಾರ ರದ್ದುಪಡಿಸಿದೆ.
ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ನೇತೃತ್ವದ ಪೀಠ ಈ ಕುರಿತು ತೀರ್ಪು ನೀಡಿತು.
ಈ ಸ್ವಯಂ ಪ್ರೇರಿತ ಪ್ರಕರಣವನ್ನು ರದ್ದುಗೊಳಿಸುವುದಕ್ಕೂ ಮುನ್ನ ಸುಪ್ರಿಂಕೋರ್ಟ್, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಸ್.ಎ.ಬೊಬಡೆ (ಈಗಿನ ಸಿಜೆಐ) ಅವರ ನೇತೃತ್ವದ ಮೂವರ ಪೀಠನೀಡಿರುವ ವರದಿಯಲ್ಲಿ ಗೊಗೋಯಿ ಅವರನ್ನು ದೋಷಮುಕ್ತಗೊಳಿಸಲಾಗಿದೆ ಎಂದು ಹೇಳಿರುವುದನ್ನು ಉಲ್ಲೇಖಿಸಿದೆ.
ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ವಿ. ರಾಮಸುಬ್ರಮಣಿಯನ್ ಅವರನ್ನೂ ಒಳಗೊಂಡ ನ್ಯಾಯಪೀಠವು, ಪಿತೂರಿಯ ಬಗ್ಗೆ ತನಿಖೆ ನಡೆಸಲು ನೇಮಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಸಮಿತಿಗೆ ವಾಟ್ಸ್‌ಆ್ಯಪ್ ಸಂದೇಶಗಳಂತಹ ಎಲೆಕ್ಟ್ರಾನಿಕ್ ದಾಖಲೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಈ ಸ್ವಯಂ ಪ್ರೇರಿತ ಪ್ರಕರಣವನ್ನು ಮುಂದುವರಿಸಿದರೆ ಯಾವುದೇ ಉದ್ದೇಶ ಸಾಧಿಸುವುದು ಸಾಧ್ಯವಿಲ್ಲ ಎಂದು ಹೇಳಿತು.
ಗೊಗೋಯಿ ಅವರು ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿಗೆ (ಎನ್‌ಆರ್‌ಸಿ) ಸಂಬಂಧಿಸಿದಂತೆ ನೀಡಿದ ತೀರ್ಪಿನಂತಹ ಕೆಲವು ಕಠಿಣ ನಿರ್ಧಾರಗಳಿಂದಾಗಿ ಕೆಲವು ಪಿತೂರಿಗಳು ನಡೆದಿರಬಹುದು ಎಂದು ಗುಪ್ತಚರ ದಳದ ನಿರ್ದೇಶಕರ ಪತ್ರವನ್ನು ಸುಪ್ರೀಂಕೋರ್ಟ್ ಉಲ್ಲೇಖಿಸಿದೆ.
ಆಗಿನ ಸಿಜೆಐ ಗೊಗೋಯಿ ಅವರ ವಿರುದ್ಧ ಕೆಲವು ಬಗೆಯ ಪಿತೂರಿಗಳು ನಡೆದಿರಬಹುದು ಎಂದು ನಂಬಲು ಬಲವಾದ ಕಾರಣಗಳಿವೆ ಎಂದು ಹೇಳಿರುವ ಪಟ್ನಾಯಕ್ ಅವರ ವರದಿಯನ್ನು ನ್ಯಾಯಪೀಠ ಉಲ್ಲೇಖಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.