ADVERTISEMENT

ತಿರುಪತಿ ಲಾಡು ಪ್ರಕರಣ: CBI ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 8 ನವೆಂಬರ್ 2024, 13:09 IST
Last Updated 8 ನವೆಂಬರ್ 2024, 13:09 IST
..
..   

ನವದೆಹಲಿ: ತಿರುಪತಿ ಲಾಡು ತಯಾರಿಸಲು ಪ್ರಾಣಿಗಳ ಕೊಬ್ಬಿನಾಂಶ ಬಳಕೆ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಸಾಮಾಜಿಕ ಕಾರ್ಯಕರ್ತ ಮತ್ತು ‘ಗ್ಲೋಬಲ್ ಪೀಸ್‌ ಇನಿಷಿಯೇಟಿವ್‌’ನ ಅಧ್ಯಕ್ಷ ಕೆ.ಎ.ಪೌಲ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿ ಬಿ.ಆರ್‌. ಗವಾಯಿ ಮತ್ತು ಕೆ.ವಿ.ವಿಶ್ವನಾಥನ್ ಅವರನ್ನು ಒಳಗೊಂಡ ನ್ಯಾಯಪೀಠವು ನಿರಾಕರಿಸಿದೆ.

'ನಿಮ್ಮ ಮನವಿಯನ್ನು ಪರಿಗಣಿಸಿದರೆ ದೇವಸ್ಥಾನ ಮತ್ತು ಗುರುದ್ವಾರಗಳಿಗೆ ಪ್ರತ್ಯೇಕ ರಾಜ್ಯವನ್ನು ರಚಿಸಬೇಕಾಗುತ್ತದೆ. ಒಂದು ಧರ್ಮಕ್ಕಾಗಿ ಪ್ರತ್ಯೇಕ ರಾಜ್ಯವನ್ನು ರಚಿಸುವಂತೆ ನಿರ್ದೇಶನ ನೀಡಲು ಸಾಧ್ಯವಿಲ್ಲ’ ಎಂದು ಪೀಠ ತಿಳಿಸಿದೆ.

ADVERTISEMENT

‘ತಿರುಪತಿ ದೇಗುಲವು ಹಿಂದೂಗಳ ಪ್ರಮುಖ ಧಾರ್ಮಿಕ ಕೇಂದ್ರವಾಗಿದ್ದು. ಪ್ರಸಾದದಲ್ಲಿ ಕಲಬೆರಕೆ ಮಾಡುವುದು ಭಕ್ತರ ಭಾವನೆಗಳಿಗೆ ಘಾಸಿ ಉಂಟು ಮಾಡುತ್ತದೆ. ಅಲ್ಲದೆ ದೇಗುಲದ ಘನತೆಗೂ ಧಕ್ಕೆ ತರುತ್ತದೆ. ಸಾಂಪ್ರದಾಯಿಕ ವಿಚಾರಗಳಲ್ಲಿ ರಾಜಕೀಯ ಮತ್ತು ಭ್ರಷ್ಟಾಚಾರ ನುಸುಳುವುದನ್ನು ತಡೆಯಲು ಮತ್ತು ಭಕ್ತರ ಹಿತದೃಷ್ಟಿಯಿಂದ ಈ ಅರ್ಜಿಯನ್ನು ಸಲ್ಲಿಸಿದ್ದೇವೆ’ ಎಂದು ಅರ್ಜಿದಾರರು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ಮೋಹನ್‌ ರೆಡ್ಡಿ ಅವರ ಅವಧಿಯಲ್ಲಿ ಲಾಡು ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ದು ಅವರು ಆರೋಪಿಸಿದ್ದರು. ಈ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್‌ ಅ.4ರಂದು ಸ್ವತಂತ್ರ ವಿಶೇಷ ತನಿಖಾ ತಂಡವನ್ನು(ಎಸ್‌ಐಟಿ) ರಚಿಸಿದೆ.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.