ನವದೆಹಲಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್‌ಮೋಹನ ರೆಡ್ಡಿ ಅವರಿಗೆ ಜಾಮೀನು ಮಂಜೂರು ಮಾಡಬಾರದು ಎಂದು ಸಿಬಿಐ ಕೋರಿದ್ದು, ಇಬ್ಬರಿಗೂ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ನ್ಯಾ. ಅಭಯ ಎಸ್. ಒಕಾ ಹಾಗೂ ನ್ಯಾ. ಪಂಕಜ್ ಮಿತ್ತಲ್ ಅವರಿದ್ದ ಪೀಠವು ಈ ಇಬ್ಬರ ಜತೆಗೆ ವೈಎಸ್‌ಆರ್ ಕಾಂಗ್ರೆಸ್ ಅತೃಪ್ತ ಸಂಸದ ರಘುರಾಮಕೃಷ್ಣ ರಾಜು ಅವರಿಗೂ ನೋಟಿಸ್ ಜಾರಿ ಮಾಡಿದೆ.
ತೆಲಂಗಾಣದ ಹೈದರಾಬಾದ್ ನ್ಯಾಯಾಲಯದಲ್ಲಿದ್ದ ಈ ಪ್ರಕರಣವನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐ ಹಾಗೂ ಜಗನ್‌ಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತ್ತು. ನಂತರ ಜನವರಿಯಲ್ಲಿ ದಾಖಲಾದ ಪ್ರಕರಣದ ವಿಚಾರಣೆಗೆ ವಿಳಂಬವಾಗುತ್ತಿರುವುದೇಕೆ ಎಂದು ರಾಜು ಅವರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು.
‘ಜಗನ್ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಹಾಗೂ ಅನ್ಯಾಯ ರೂಪದಲ್ಲಿ ಸುಮಾರು ₹40ಸಾವಿರ ಕೋಟಿ ಮೊತ್ತದ ಹೂಡಿಕೆಯನ್ನು ಹಲವು ಕಂಪನಿಗಳಲ್ಲಿ ಮಾಡಿದ್ದಾರೆ. ಅದರ ಜತೆಗೆ ಸಾರ್ವಜನಿಕ ಸಂಸ್ಥೆಗಳಿಗೆ ನಷ್ಟ ಉಂಟು ಮಾಡಿದ್ದಾರೆ. ಈ ಕುರಿತು ಸಲ್ಲಿಕೆಯಾಗಿದ್ದ ಕ್ರಮಿನಲ್ ಮೊಕದ್ದಮೆಯೂ ನಿಷ್ಕ್ರಿಯಗೊಂಡಿದೆ’ ಎಂದು ರಾಜು ಆರೋಪಿಸಿದ್ದರು.
ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ 2012ರಲ್ಲಿ ರಾಜು ಅವರು ದೂರು ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಿಬಿಐ 11 ಜನರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.