ADVERTISEMENT

NEET ಪ್ರಕರಣ: ಕೇಂದ್ರ ಸರ್ಕಾರ, NTAಗೆ ಸುಪ್ರೀಂ ಕೋರ್ಟ್ ನೋಟಿಸ್

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 10:07 IST
Last Updated 20 ಜೂನ್ 2024, 10:07 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆಸಿದ ನೀಟ್–ಯುಜಿ 2024 ಪರೀಕ್ಷೆಯನ್ನು ರದ್ದುಪಡಿಸಬೇಕು ಹಾಗೂ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂಬ ಕೋರಿಕೆ ಇರುವ ಅರ್ಜಿಗಳು ಸೇರಿದಂತೆ ಹಲವು ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ (ಎನ್‌ಟಿಎ) ಸುಪ್ರೀಂ ಕೋರ್ಟ್‌ ಪ್ರತಿಕ್ರಿಯೆ ಕೇಳಿದೆ.

ಇದರ ಜೊತೆಯಲ್ಲೇ, ನೀಟ್‌–ಯುಜಿ 2024 ಪರೀಕ್ಷೆಗೆ ಸಂಬಂಧಿಸಿದಂತೆ ಬೇರೆ ಬೇರೆ ಹೈಕೋರ್ಟ್‌ಗಳಲ್ಲಿ ನಡೆಯುತ್ತಿರುವ ವಿಚಾರಣೆಗಳಿಗೆ ನ್ಯಾಯಮೂರ್ತಿಗಳಾದ ವಿಕ್ರಮನಾಥ್ ಮತ್ತು ಎಸ್.ವಿ.ಎನ್. ಭಟ್ಟಿ ಅವರು ಇದ್ದ ವಿಭಾಗೀಯ ಪೀಠವು ಗುರುವಾರ ತಡೆಯಾಜ್ಞೆ ನೀಡಿದೆ. ಮುಂದಿನ ವಿಚಾರಣೆಯನ್ನು ಜುಲೈ 8ರಂದು ನಡೆಸಲಾಗುತ್ತದೆ ಎಂದು ಪೀಠ ಹೇಳಿದೆ. ಆ ದಿನಕ್ಕೆ ಮೊದಲು ಕೇಂದ್ರ ಸರ್ಕಾರ ಹಾಗೂ ಎನ್‌ಟಿಎ ಪ್ರತಿಕ್ರಿಯೆ ಸಲ್ಲಿಸಬೇಕಿದೆ.

ADVERTISEMENT

ಆದರೆ, ಕೌನ್ಸೆಲಿಂಗ್ ಪ್ರಕ್ರಿಯೆಗೆ ತಡೆ ಇಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ. ಕೌನ್ಸೆಲಿಂಗ್ ಪ್ರಕ್ರಿಯೆಯು ಜುಲೈ 6ರಂದು ಶುರುವಾಗಲಿದೆ. ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಿಹಾರದಲ್ಲಿ ಬಂಧಿಸಲಾಗಿದೆ ಎಂದು ವಕೀಲರೊಬ್ಬರು ಪೀಠಕ್ಕೆ ಮಾಹಿತಿ ನೀಡಿದರು.

ಅಕ್ರಮಗಳ ಆರೋಪ ಕುರಿತು ಬಿಹಾರ ಹಾಗೂ ಗುಜರಾತ್‌ನಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ವಸ್ತುಸ್ಥಿತಿ ಏನಿದೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ವಕೀಲರೊಬ್ಬರು ಮನವಿ ಮಾಡಿದರು.

ನೀಟ್–ಯುಜಿ 2024 ಪರೀಕ್ಷೆಗೆ ಸಂಬಂಧಿಸಿದ ಅರ್ಜಿಗಳನ್ನು ಸಲ್ಲಿಸಿದವರ ವಾದಗಳಲ್ಲಿ ಸಾಮ್ಯ ಇದೆ ಎಂದು ಪೀಠವು ಹೇಳಿತು. ಬಿಹಾರದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿದೆ, ಪರೀಕ್ಷೆಯಲ್ಲಿ ಇತರ ಕೆಲವು ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಇವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.