ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಈ ಹಿಂದಿನ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ಈಗಿನ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಹಾಗೂ ಶಿವಕುಮಾರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ನೋಟಿಸ್ ಜಾರಿ ಮಾಡಿದೆ.
ನ್ಯಾ. ಸೂರ್ಯ ಕಾಂತ್ ಹಾಗೂ ನ್ಯಾ. ಉಜ್ಜಲ್ ಭುಯನ್ ಅವರಿದ್ದ ಪೀಠವು ಸೋಮವಾರ ಅರ್ಜಿಯ ವಿಚಾರಣೆ ನಡೆಸಿತು. ಕರ್ನಾಟಕ ಹೈಕೋರ್ಟ್‌ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂದು ಸಿಬಿಐ ಪರ ವಕೀಲರು ಪೀಠದ ಗಮನಕ್ಕೆ ತಂದರು. ಇದನ್ನು ಪುರಸ್ಕರಿಸಿದ ಪೀಠ, ರಾಜ್ಯ ಸರ್ಕಾರ ಮತ್ತು ಡಿ.ಕೆ. ಶಿವಕುಮಾರ್‌ಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯಿಸುವಂತೆ ನಿರ್ದೇಶಿಸಿದೆ.
ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ 2019ರಲ್ಲಿದ್ದ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು. 2023ರ ನ. 23ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿಬಿಐಗೆ ನೀಡಿದ್ದ ತನಿಖೆಯನ್ನು ಹಿಂಪಡೆದಿತ್ತು.
ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಹಾಗೂ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕರ್ನಾಟಕ ಹೈಕೋರ್ಟ್ ಈ ಅರ್ಜಿಗಳನ್ನು ವಜಾಗೊಳಿಸಿತ್ತು.
‘ಸಿಬಿಐ ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತದೆ. ಅರ್ಜಿಯಲ್ಲಿ ದೆಹಲಿ ವಿಶೇಷ ಪೊಲೀಸ್ ಕಾಯ್ದೆ-1946 ಮತ್ತು ಅಕ್ರಮ ಹಣ ವರ್ಗಾವಣೆ ಕಾಯ್ದೆ-2002ರ ಅನ್ವಯ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಂವಿಧಾನಿಕ ಅಧಿಕಾರದ ಕುರಿತಾದ ನಿಬಂಧನೆಗಳಿಗೆ ಸಂಬಂಧಿಸಿದ ವಿಚಾರಗಳು ಇಲ್ಲಿ ಉದ್ಭವವಾಗಿವೆ. ಅರ್ಜಿಯಲ್ಲಿನ ಎಲ್ಲ ಪಕ್ಷಗಾರರ ವಾದ ಮತ್ತು ಕಾನೂನಿನ ನಿಬಂಧನೆಗಳನ್ನು ಸೂಕ್ಷ್ಮವಾಗಿ ಆಲಿಸಿದಾಗ ಇದು ಮನದಟ್ಟಾಗಿದೆ’ ಎಂದು ನ್ಯಾಯಪೀಠ ಹೇಳಿತ್ತು.
‘ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದು ಕಾನೂನಿನ ವಿಚಾರಕ್ಕೆ ಒಳಪಟ್ಟಿದೆ. ಈ ಪ್ರಕರಣದಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿವೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಸಂಘರ್ಷ ಇದ್ದು ಪ್ರಕರಣವನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದೇ ಸೂಕ್ತವಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.
‘ಈ ಕಾರಣಗಳಿಂದ ಎರಡೂ ಅರ್ಜಿಗಳು ಅನೂರ್ಜಿತವಾಗಲಿದ್ದು, ಇವುಗಳನ್ನು ವಜಾಗೊಳಿಸಲಾಗಿದೆ. ಅದಾಗ್ಯೂ, ಅರ್ಜಿದಾರರು ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು’ ಎಂದು ನ್ಯಾಯಪೀಠ ತೀರ್ಪಿನಲ್ಲಿ ವಿವರಿಸಿತ್ತು.
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯತ್ನಾಳ್ ಅವರ ಮೇಲ್ಮನವಿಗೆ ಸಂಬಂಧಿಸಿದಂತೆ ಸೆ. 17ರಂದು ಇದೇ ಪೀಠವು ರಾಜ್ಯ ಸರ್ಕಾರ ಹಾಗೂ ಡಿ.ಕೆ. ಶಿವಕುಮಾರ್‌ಗೆ ನೋಟಿಸ್ ಜಾರಿ ಆಗಿತ್ತು.
ಪ್ರಕರಣವೇನು?: 2013ರಿಂದ 2018ರವರೆಗೆ ರಾಜ್ಯದಲ್ಲಿದ್ದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಕುಮಾರ್ ಅವರು ಆದಾಯ ಮೀರಿ ₹ 74.93 ಕೋಟಿಯಷ್ಟು ಆಸ್ತಿ ಗಳಿಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ 2019ರ ಸೆಪ್ಟೆಂಬರ್ 25ರಂದು ಅಂದಿನ ಬಿಜೆಪಿ ಸರ್ಕಾರ ಅನುಮತಿ ನೀಡಿತ್ತು. ಈ ಅನುಮತಿಯನ್ನು ಈಗಿನ ಕಾಂಗ್ರೆಸ್ ಸರ್ಕಾರ 2023ರ ನವೆಂಬರ್ 23ರಂದು ಹಿಂಪಡೆದಿತ್ತು. ನಂತರ 2023ರ ಡಿಸೆಂಬರ್ 28ರಂದು ಲೋಕಾಯುಕ್ತ ತನಿಖೆಗೆ ವಹಿಸಿತ್ತು.
ಇದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅಲ್ಲಿ ಅರ್ಜಿ ವಜಾಗೊಂಡ ನಂತರ ಸಿಬಿಐ ಹಾಗೂ ಶಾಸಕ ಯತ್ನಾಳ ಸುಪ್ರೀಂ ಮೊರೆ ಹೋಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.