ನವದೆಹಲಿ: ತನ್ನ 28 ವಾರಗಳ ಭ್ರೂಣವನ್ನು ತೆಗೆಸಲು ಅನುಮತಿ ಕೋರಿರುವ 14 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ತಕ್ಷಣವೇ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರ್ದೇಶನ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆ.ಬಿ.ಪಾರ್ದೀವಾಲಾ ಅವರ ಪೀಠವು, ಬಾಲಕಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಗರ್ಭಾವಸ್ಥೆಯ ಸಂಭವನೀಯ ಪರಿಣಾಮಗಳ ಕುರಿತು ಪರೀಕ್ಷೆ ನಡೆಸುವಂತೆ ನಿರ್ದೇಶಿಸಿದೆ. ಈ ವಿಷಯವನ್ನು ಸೋಮವಾರ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಪೀಠ ಹೇಳಿದೆ.
ಬಾಲಕಿಯ ತಾಯಿ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್ ಏಪ್ರಿಲ್ 4ರಂದು ತಿರಸ್ಕರಿಸಿತ್ತು. ಬಳಿಕ ಅವರು ಸುಪ್ರೀಂ ಕೋರ್ಟ್ ಮೊರೆಹೋಗಿದ್ದರು. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಆಕೆ ಗರ್ಭಿಣಿಯಾಗಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿದೆ.
ಸಂತ್ರಸ್ತ ಬಾಲಕಿಯನ್ನು ಇದೇ 20ರಂದು (ಶನಿವಾರ) ಸಿಯಾನ್ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಿ, ಆಸ್ಪತ್ರೆಯ ವರದಿಯನ್ನು ಇದೇ 22ರಂದು (ಸೋಮವಾರ) ಬೆಳಿಗ್ಗೆ 10.30ಕ್ಕೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಪೀಠ ಸೂಚಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.