ನವದೆಹಲಿ: ತಮಿಳುನಾಡು ಪೊಲೀಸರು ಗೂಂಡಾ ಕಾಯ್ದೆಯ ಅಡಿಯಲ್ಲಿ ಮೇ ತಿಂಗಳಲ್ಲಿ ಬಂಧಿಸಿದ್ದ ಯೂಟ್ಯೂಬರ್ ‘ಸವುಕ್ಕು’ ಶಂಕರ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದೆ.
ಶಂಕರ್ ಅವರನ್ನು ಈಗ ಕೊಯಮತ್ತೂರು ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ. ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರು ಇದ್ದ ವಿಭಾಗೀಯ ಪೀಠವು ಶಂಕರ್ ಅವರ ಬಿಡುಗಡೆಗೆ ಆದೇಶಿಸಿದೆ.
ಆದರೆ ಅವರ ವಿರುದ್ಧದ ಆರೋಪಗಳ ಸತ್ಯಾಸತ್ಯತೆಯನ್ನು ತಾನು ಪರಿಶೀಲಿಸಲು ಮುಂದಾಗುವುದಿಲ್ಲ, ಆ ವಿಚಾರವು ಮದ್ರಾಸ್ ಹೈಕೋರ್ಟ್ ಮುಂದೆ ಇದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.
‘ಬಂಧನವನ್ನು ಪ್ರಶ್ನಿಸಿರುವ ಅರ್ಜಿಯನ್ನು ಹೈಕೋರ್ಟ್ ಇತ್ಯರ್ಥಪಡಿಸುವವರೆಗೆ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡಬೇಕು’ ಎಂದು ಪೀಠವು ಹೇಳಿದೆ. ಆದರೆ ಶಂಕರ್ ಅವರು ಬೇರೆ ಯಾವುದಾದರೂ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದರೆ ಈ ಆದೇಶವು ಅದಕ್ಕೆ ಅನ್ವಯವಾಗುವುದಿಲ್ಲ ಎಂದು ಪೀಠವು ಸ್ಪಷ್ಟಪಡಿಸಿದೆ.
ಗೂಂಡಾ ಕಾಯ್ದೆಯ ಅಡಿಯಲ್ಲಿ ಶಂಕರ್ ಅವರನ್ನು ಬಂಧಿಸಿರುವ ಕ್ರಮ ಪ್ರಶ್ನಿಸಿ ಅವರ ತಾಯಿ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆಯನ್ನು ಮದ್ರಾಸ್ ಹೈಕೋರ್ಟ್ ಮುಂದೂಡಿದ್ದನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗಿತ್ತು.
ಶಂಕರ್ ಅವರನ್ನು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸುವುದರ ಅಗತ್ಯ ಏನು ಎಂಬುದನ್ನು ತಿಳಿಸುವಂತೆ ತಮಿಳುನಾಡು ಸರ್ಕಾರದ ಪರ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ಅವರಿಗೆ ಹೇಳಿತು. ಶಂಕರ್ ಅವರು ದಾಖಲೆಗಳನ್ನು ತಿದ್ದಿದ ಹಾಗೂ ದುರುದ್ದೇಶದ ಕೃತ್ಯ ಎಸಗಿದ ಆರೋಪ ಎದುರಿಸುತ್ತಿದ್ದಾರೆ ಎಂದು ಲೂಥ್ರಾ ಹೇಳಿದರು.
‘ಆದರೆ, ಅವರನ್ನು ಬಂಧನದಲ್ಲಿ ಇರಿಸುವುದು ಏಕೆ? ಅವರು ಈ ದೇಶದ ಭದ್ರತೆಗೆ ಬೆದರಿಕೆಯಾಗಿದ್ದಾರೆಯೆ? ಇದು ಸಾಮಾನ್ಯವಾದ ಸಿವಿಲ್ ವ್ಯಾಜ್ಯ ಅಲ್ಲ, ಇದು ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧಿಸಿದ್ದಕ್ಕೆ ಸಂಬಂಧಿಸಿದೆ. ವ್ಯಕ್ತಿಯ ಸ್ವಾತಂತ್ರ್ಯದ ಪ್ರಶ್ನೆ ಇಲ್ಲಿದೆ. ಅವರನ್ನು ಎರಡು ತಿಂಗಳಿಗೂ ಹೆಚ್ಚಿನ ಅವಧಿಯಿಂದ ಮುನ್ನೆಚ್ಚರಿಕೆಯ ಕ್ರಮವಾಗಿ ಬಂಧನದಲ್ಲಿ ಇರಿಸಲಾಗಿದೆ’ ಎಂದು ಪೀಠ ಹೇಳಿತು.
ಶಂಕರ್ ಅವರ ತಾಯಿಯ ಪರವಾಗಿ ಹಾಜರಿದ್ದ ಹಿರಿಯ ವಕೀಲ ಸಿದ್ಧಾರ್ಥ ದವೆ ಅವರು, ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು ಪಡೆದು ಅವರು ಜೈಲಿನಿಂದ ಹೊರಬರಬಹುದು ಎಂಬ ಕಾರಣಕ್ಕಾಗಿಯೇ ಅವರನ್ನು ಹೀಗೆ ಬಂಧಿಸಲಾಗಿದೆ ಎಂದರು.
ಶಂಕರ್ ಅವರ ವಿರುದ್ಧ ಏಳು ಪ್ರಕರಣಗಳು ಇವೆ. ಮೂರು ಪ್ರಕರಣಗಳಲ್ಲಿ ತನಿಖೆ ನಡೆಯುತ್ತಿದೆ, ಎರಡು ಪ್ರಕರಣಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ, ಇನ್ನುಳಿದ ಪ್ರಕರಣಗಳ ವಿಚಾರಣೆ ಬಾಕಿ ಇದೆ ಎಂದು ಚೆನ್ನೈ ಪೊಲೀಸರು ನೀಡಿರುವ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. ಶಂಕರ್ ಅವರು ಡಿಎಂಕೆ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಕಟು ಟೀಕಾಕಾರರೂ ಹೌದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.