ADVERTISEMENT

ಸೆಂಥಿಲ್‌ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2023, 12:48 IST
Last Updated 28 ನವೆಂಬರ್ 2023, 12:48 IST
ಸೆಂಥಿಲ್ ಬಾಲಾಜಿ
ಸೆಂಥಿಲ್ ಬಾಲಾಜಿ   

ನವದೆಹಲಿ: ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಬಂಧಿತರಾಗಿರುವ ತಮಿಳುನಾಡಿನ ಸಚಿವ ವಿ.ಸೆಂಥಿಲ್‌ ಬಾಲಾಜಿ ಅವರು ವೈದ್ಯಕೀಯ ವರದಿಗಳ ಆಧಾರದ ಮೇಲೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂಕೋರ್ಟ್‌ ಮಂಗಳವಾರ ನಿರಾಕರಿಸಿದೆ.

ಜಾಮೀನು ನೀಡಲು ನಿರಾಕರಿಸಿದ್ದ ಮದ್ರಾಸ್‌ ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ, ಸೆಂಥಿಲ್ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದರು. 

ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಎಸ್‌.ಸಿ.ಶರ್ಮಾ ಅವರಿದ್ದ ನ್ಯಾಯಪೀಠ, ಅವರ ಅನಾರೋಗ್ಯವು ‘ಗಂಭೀರ ಅಥವಾ ಪ್ರಾಣಕ್ಕೆ ಅಪಾಯವಾಗುವಂತೆ ತೋರುತ್ತಿಲ್ಲ’ ಎಂದು ಹೇಳಿತು. ಆದರೆ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಲು ಸ್ವತಂತ್ರರು ಎಂದಿತು. 

ADVERTISEMENT

‘ಸೆಂಥಿಲ್‌ ಅವರು ಜಾಮೀನಿನ ಮೇಲೆ ಹೊರಬಂದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ’ ಎಂದು ಮದ್ರಾಸ್‌ ಹೈಕೋರ್ಟ್‌ ಅ.19 ರಂದು ನೀಡಿದ್ದ ತೀರ್ಪಿನಲ್ಲಿ ತಿಳಿಸಿತ್ತು. 

ಉದ್ಯೋಗಕ್ಕಾಗಿ ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿ ಜೂನ್‌ 14ರಂದು ಸೆಂಥಿಲ್‌ ಅವರ ನಿವಾಸ ಹಾಗೂ ಅವರಿಗೆ ಸೇರಿದ ಸ್ಥಳಗಳಲ್ಲಿ ಶೋಧ ನಡೆಸಿದ್ದ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು, ಬಳಿಕ ಅವರನ್ನು ಬಂಧಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.