ನವದೆಹಲಿ: ಕೋಲ್ಕತ್ತದ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆಯ ನೇರ ಪ್ರಸಾರ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಇದು ಸಾರ್ವಜನಿಕ ಹಿತಾಸಕ್ತಿಯ ವಿಷಯವಾಗಿದೆ ಮತ್ತು ನ್ಯಾಯಾಲಯದಲ್ಲಿ ಏನು ನಡೆಯುತ್ತಿದೆ ಎಂಬುದು ಸಾರ್ವಜನಿಕರಿಗೆ ತಿಳಿದಿರಬೇಕು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಮಂಗಳವಾರ ಪ್ರಕರಣದ ವಿಚಾರಣೆಯನ್ನು ಕೈಗೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಪ್ರಕರಣದ ಸಂಬಂಧ ಸಿಬಿಐ ಸಲ್ಲಿಸಿದ ವರದಿಯನ್ನು ಪರಿಶೀಲಿಸಿತು.
ವಿಚಾರಣೆ ಆರಂಭವಾಗುತ್ತಿದ್ದಂತೆ, ಪಶ್ಚಿಮ ಬಂಗಾಳ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರಕರಣದ ವಿಚಾರಣೆಯ ನೇರ ಪ್ರಸಾರ ನಿಲ್ಲಿಸುವಂತೆ ಕೋರಿದರು. ಚೇಂಬರ್‌ನ ಮಹಿಳಾ ವಕೀಲರು ಆ್ಯಸಿಡ್ ದಾಳಿ ಮತ್ತು ಅತ್ಯಾಚಾರದ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ ಎಂದು ಅವರು ದೂರಿದರು.
ವಕೀಲರು ಮತ್ತು ಇತರರಿಗೆ ಬೆದರಿಕೆ ಬಂದಲ್ಲಿ ತಾನು ಮಧ್ಯಪ್ರವೇಶಿಸುವುದಾಗಿ ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಭರವಸೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.